ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಕಚೇರಿಯಲ್ಲಿ ಘೋಷಣೆಗಳನ್ನು ಕೂಗಿದ ಎನ್‌ಎಸ್‌ಯುಐ ಸದಸ್ಯರು
ಪಿಟಿಐ ಚಿತ್ರ
ನವದೆಹಲಿ: ನೀಟ್–ಯುಜಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ಸದಸ್ಯರು, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಕಚೇರಿಗೆ ನುಗ್ಗಿ ಘೋಷಣೆಗಳನ್ನು ಕೂಗಿದ್ದಾರೆ.
ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯಾಗಿರುವ ಎನ್‌ಎಸ್‌ಯುಐ ಸದಸ್ಯರು, ಒಖ್ಲಾದಲ್ಲಿರುವ ಕಚೇರಿಗೆ ನುಗ್ಗಿ 'ಎನ್‌ಟಿಎಯನ್ನು ಮುಚ್ಚಿ' ಎಂದು ಘೋಷಣೆಗಳನ್ನು ಕೂಗಿದ್ದಾರೆ. ಇದಕ್ಕೆ ಸಂಬಂಧಿಸಿದ ಚಿತ್ರಗಳನ್ನು ಎನ್‌ಎಸ್‌ಯುಐ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದೆ.
ಈ ಸಂಬಂಧ ಎನ್‌ಟಿಎ ಅಧಿಕಾರಿಗಳು ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ದೇಶದಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಸೇರಿದಂತೆ ಇತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನೀಟ್–ಯುಜಿ ಪರೀಕ್ಷೆಯನ್ನು ಎನ್‌ಟಿಎ ನಡೆಸುತ್ತದೆ.
ಮೇ 5ರಂದು ನಡೆದ ಈ ಪರೀಕ್ಷೆಗೆ 23 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶ ಪ್ರಕಟಿಸಿತ್ತು. ಆದರೆ, ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು.
ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸಿಬಿಐ ತನಿಖೆಗೆ ಆಗ್ರಹಿಸಿದ್ದರಿಂದ ಕೇಂದ್ರ ಆರೋಗ್ಯ ಸಚಿವಾಲಯವು ಇದೇ 22ರಂದು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ತನಿಖಾ ಸಂಸ್ಥೆಯು ಮರುದಿನ ಮೊದಲ ಎಫ್‌ಐಆರ್ ದಾಖಲಿಸಿತ್ತು. ಇಂದು ಬಿಹಾರದ ಪಟ್ನಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.