ಭುವನೇಶ್ವರ: ಒಡಿಶಾದ ಚಿಲಿಕಾ ಕ್ಷೇತ್ರದ ಬಿಜೆಡಿ ಶಾಸಕ ಪ್ರಶಾಂತ್ ಜಗದೇವ್ ಅವರ ವಾಹನ ಜನರ ಮೇಲೆ ಹರಿದು ಏಳು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 22 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಘಟನೆಯ ಬಳಿಕ ಕೋಪೋದ್ರಿಕ್ತಗೊಂಡಜನರ ಗುಂಪು, ಶಾಸಕನಿಗೆ ಥಳಿಸಿದ್ದಾರೆ. ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಶಾಸಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬ್ಲಾಕ್ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತಿದ್ದಾಗ ಬಾಣಾಪುರ ಬಿಡಿಒ ಕಚೇರಿಯ ಹೊರಗಡೆ ಜನರು ಜಮಾಯಿಸಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಬಾಣಾಪುರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಆರ್. ಆರ್. ಸಾಹು ಕೂಡ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಭುವನೇಶ್ವರದ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜೆಪಿಯ ಸುಮಾರು 15 ಕಾರ್ಯಕರ್ತರು ಮತ್ತು ಏಳು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಪ್ರಕರಣದ ಸಂಬಂಧ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಕಳೆದ ವರ್ಷ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಜಗದೇವ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.