ಒಡಿಶಾದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಸ್ಥಿತಿ ಉಂಟಾಗಿದೆ.
–ಪಿಟಿಐ ಚಿತ್ರ
ಭುವನೇಶ್ವರ: ಒಡಿಶಾದ ನುವಾಪಾ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದ ಕೋಳಿಫಾರಂ ಗೋಡೆ ಕುಸಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ವರ್ಷದ ಬಾಲಕಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಖಾನಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಬಲ್ಮತಿ ಸಬರ್ (35), ರೂಪೆ ಸಬರ್ (61) ಎಂದು ಗುರುತಿಸಲಾಗಿದೆ. ಗಾಯಗೊಂಡ ಬಾಲಕಿ ರಿಧಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಡಿಶಾದ 30 ಜಿಲ್ಲೆಗಳ ಪೈಕಿ 16 ಜಿಲ್ಲೆಗಳಲ್ಲಿ ಇಂದು (ಸೋಮವಾರ) ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (ಐಎಂಡಿ) ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಭಾನುವಾರ ಒಡಿಶಾದ ರಾಜಧಾನಿ ಭುವನೇಶ್ವರ ಸೇರಿದಂತೆ ಹಲವಾರು ಭಾಗಗಳಲ್ಲಿ ವ್ಯಾಪಕ ಮಳೆಯಾಗಿತ್ತು.
ಬಾಲೇಶ್ವರ, ಬಾಲಂಗೀರ್, ಸೋನೆಪುರ್, ಬೌಧ್, ಕಂಧಮಲ್, ಕಲಹಂಡಿ, ನಯಾಗಢ, ಕಟಕ್, ಧೆಂಕನಲ್, ಭದ್ರಕ್, ಜಾಜ್‌ಪುರ, ಕೇಂದ್ರಪಾರ, ಜಗತ್‌ಸಿಂಗ್‌ಪುರ, ದಿಯೋಗಢ, ಮಯೂರ್‌ಭಂಜ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಹಾನದಿ ಸೇರಿದಂತೆ ಪ್ರಮುಖ ನದಿಗಳ ನೀರಿನ ಮಟ್ಟ ಹೆಚ್ಚಾಗಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.