ಬಂಧನ
(ಪ್ರಾತಿನಿಧಿಕ ಚಿತ್ರ)
ಭುವನೇಶ್ವರ: ಒಡಿಶಾದ ಬಾಲೇಶ್ವರ ಜಿಲ್ಲೆಯ ಕಾಲೇಜುವೊಂದರಲ್ಲಿ ವಿದ್ಯಾರ್ಥಿನಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ನನಗೆ ಪ್ರಾಧ್ಯಾಪಕರ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬಿ.ಎಡ್ ವಿದ್ಯಾರ್ಥಿನಿಯೊಬ್ಬರು ಫಕೀರ್ ಮೋಹನ್ ಕಾಲೇಜಿನ ಪ್ರಾಂಶುಪಾಲ ದಿಲೀಪ್ ಘೋಷ್ ಅವರಿಗೆ ದೂರು ನೀಡಿದ್ದರು. ಆದರೆ, ಪ್ರಾಂಶುಪಾಲರು ಪ್ರಾಧ್ಯಾಪಕರ ವಿರುದ್ಧ ಯಾವುದೇ ಕ್ರಮ ಜರುಗಿಸದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರಕರಣ ಸಂಬಂಧ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ದಿಲೀಪ್ ಘೋಷ್ ಅವರನ್ನು ಅಮಾನತುಗೊಳಿಸಿ ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಅಯುಕ್ತ ಸಮೀರ್ ಕುಮಾರ್ ಸಾಹು ಆದೇಶ ಹೊರಡಿಸಿದ್ದಾರೆ.
‘ನನ್ನ ಮಗಳು ಪ್ರಾಂಶುಪಾಲರ ಕೊಠಡಿಯಿಂದ ಹೊರಬಂದ ಕೆಲವೇ ನಿಮಿಷಗಳಲ್ಲಿ ಬೆಂಕಿ ಹಚ್ಚಿಕೊಂಡಿದ್ದಾರೆ. ನನ್ನ ಮಗಳಿಗೆ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡಿದ ಪ್ರಾಧ್ಯಾಪಕನ ವಿರುದ್ಧದ ದೂರನ್ನು ಹಿಂಪಡೆಯುವಂತೆ ಪ್ರಾಂಶುಪಾಲರು ಒತ್ತಡ ಹೇರಿದ್ದರು’ ಎಂದು ಆಕೆಯ ತಂದೆ ಆರೋಪಿಸಿದ್ದಾರೆ.
ಘಟನೆ ಸಂಬಂಧ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಒಡಿಶಾ ಸರ್ಕಾರವು ಪ್ರಕರಣದ ತನಿಖೆ ವಿಶೇಷ ತಂಡವನ್ನು ರಚಿಸಿದೆ. ಇತ್ತ ಪ್ರಕರಣದ ತನಿಖೆಗಾಗಿ ಶಿಕ್ಷಣ ಇಲಾಖೆಯು ಮೂವರು ಸದಸ್ಯರ ಸಮಿತಿಯನ್ನು ರಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.