ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: 'ಆಪರೇಷನ್ ಸಿಂಧೂರ' ಸೇನಾ ಕಾರ್ಯಾಚರಣೆ ಕುರಿತು ಚರ್ಚಿಸಲು ಕೇಂದ್ರ ಸರ್ಕಾರ ಕರೆದಿರುವ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಬೇಕು. ಆ ಮೂಲಕ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ವಿರೋಧ ಪಕ್ಷ ಕಾಂಗ್ರೆಸ್ ಒತ್ತಾಯಿಸಿದೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಉಗ್ರರು ಇತ್ತೀಚೆಗೆ ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ, ಭಾರತೀಯ ಸೇನೆ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳ ಮೇಲೆ ಬುಧವಾರ ಮುಂಜಾನೆ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸಿದೆ. ಜಾಗತಿಕ ಉಗ್ರ ಮಸೂದ್ ಅಜರ್‌ನ ಕುಟುಂಬದ 10 ಸದಸ್ಯರು, ನಾಲ್ವರು ಆಪ್ತರು ಸೇರಿದಂತೆ 70ರಿಂದ 100 ಭಯೋತ್ಪಾದಕರು ಈ ವೇಳೆ ಹತ್ಯೆಯಾಗಿದ್ದಾರೆ.
ಕಾರ್ಯಾಚರಣೆ ಕುರಿತು ಕೇಂದ್ರ ಸರ್ಕಾರವು ಇಂದು ಸರ್ವಪಕ್ಷಗಳ ಸಭೆ ಕರೆದಿದೆ.
ಈ ಕುರಿತು ಸಮಾಜಿಕ ಮಾಧ್ಯಮ ಎಕ್ಸ್/ಟ್ವಿಟರ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 'ನಾವು ಸರ್ವಪಕ್ಷ ಸಭೆ ಕರೆಯುವಂತೆ ಏಪ್ರಿಲ್ 24ರಂದು ಒತ್ತಾಯಿಸಿದ್ದೆವು. ಅದೇ ದಿನ ಸಭೆ ಕರೆಯಲಾಗಿತ್ತು. ಪ್ರಧಾನಿ ಮೋದಿ ಅವರು ಪಾಲ್ಗೊಳ್ಳುತ್ತಾರೆ ಎಂದು ಭಾವಿಸಿದ್ದೆವು. ಆದರೆ, ಯಾವುದೋ ಕಾರಣದಿಂದ ಅವರು ಭಾಗವಹಿಸಿರಲಿಲ್ಲ. ಇದೀಗ, ಆಪರೇಷನ್ ಸಿಂಧೂರ ಬಳಿಕ ಸರ್ವಪಕ್ಷ ಸಭೆ ಕರೆಯಲಾಗಿದೆ. ಮೋದಿ ಅವರು ಸಭೆಯ ಅಧ್ಯಕ್ಷತೆ ವಹಿಸಿ, ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾತುಕತೆ ನಡೆಸುತ್ತಾರೆ ಎಂದು ಭಾವಿಸಿದ್ದೇವೆ' ಎಂದಿದ್ದಾರೆ.
ಹಾಗೆಯೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ರಮೇಶ್ ತಿಳಿಸಿದ್ದಾರೆ.
ಸಂಸತ್ ಭವನದಲ್ಲಿ ಗುರುವಾರ ಬೆಳಿಗ್ಗೆ 11ಕ್ಕೆ ಸರ್ವಪಕ್ಷಗಳ ಸಭೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಬುಧವಾರ ಮಾಹಿತಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.