
ಉಪೇಂದ್ರ ದ್ವಿವೇದಿ
ನವದೆಹಲಿ: 'ಆಪರೇಷನ್ ಸಿಂಧೂರ' ಇನ್ನೂ ಮುಂದುವರಿದಿದ್ದು, ಶತ್ರುಗಳು ದುಸ್ಸಾಹಸಕ್ಕೆ ಮುಂದಾದರೆ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಇಂದು (ಮಂಗಳವಾರ) ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ದ್ವಿವೇದಿ, 'ಚೀನಾ ಜೊತೆ ಹೊಂದಿಕೊಂಡಿರುವ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ)ಯಲ್ಲಿ ಪರಿಸ್ಥಿತಿ ಸ್ಥಿರವಾಗಿದ್ದು, ಆದರೂ ಜಾಗರೂಕತೆಯಿಂದಿರುವ ಅಗತ್ಯವಿದೆ' ಎಂದಿದ್ದಾರೆ.
ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಕುರಿತು ವಿವಿಧ ಅಂಶಗಳನ್ನು ವಿವರಣೆ ನೀಡಿದ ಜನರಲ್ ದ್ವಿವೇದಿ, 'ನಿಮಗೆಲ್ಲರಿಗೂ ತಿಳಿದಿರುವಂತೆಯೇ ಆಪರೇಷನ್ ಸಿಂಧೂರ ಮುಂದುವರಿದಿದೆ. ಎಲ್ಲ ರೀತಿಯಲ್ಲೂ ಸೇನೆ ಸನ್ನದ್ಧವಾಗಿದೆ' ಎಂದು ತಿಳಿಸಿದ್ದಾರೆ.
ಗಡಿಯಾಚೆಗಿನ ಭಯೋತ್ಪಾದನೆಗೆ ಭಾರತ ಸ್ಪಷ್ಟವಾದ ಉತ್ತರ ನೀಡಿದೆ. ಇದು ಸಿದ್ಧತೆ, ನಿಖರತೆ ಹಾಗೂ ಕಾರ್ಯತಂತ್ರದ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದರೂ ನಿಯಂತ್ರಣದಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ವರ್ಷ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಉಗ್ರ ನೆಲೆಗಳನ್ನು ಗುರಿಯಾಗಿಸಿ ಭಾರತ, ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.