ಜಮ್ಮು–ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
–ಪಿಟಿಐ ಚಿತ್ರ
ಶ್ರೀನಗರ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಉಗ್ರ ಸಂಘಟನೆಗಳ ಒಂಬತ್ತು ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ನಡೆಸಿದೆ.
ದಾಳಿಯ ಬೆನ್ನಲ್ಲೇ ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಉದ್ವಿಗ್ನತೆ ಹೆಚ್ಚಿರುವ ಪರಿಣಾಮ ಜಮ್ಮು, ಸಾಂಬಾ, ಕಥುವಾ, ರಜೌರಿ ಮತ್ತು ಪೂಂಚ್ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಸುದ್ದಿಸಂಸ್ಥೆ ಎಎನ್‌ಎ ವರದಿ ಮಾಡಿದೆ.
ಪಾಕಿಸ್ತಾನದ ಮೇಲೆ ಭಾರತದ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ, ಅಮೃತಸರ, ಚಂಡಿಗಢ, ಧರ್ಮಶಾಲಾ, ಲೇಹ್‌ನ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ವಿಮಾನಯಾನ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿವೆ.
ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ನಡೆಸಿದ್ದು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು 9 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಹಲವು ಉಗ್ರರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.