ಪ್ರಾತಿನಿಧಿಕ ಚಿತ್ರ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರ ಸಂಘಟನೆಗಳ 9 ಶಿಬಿರಗಳ ಮೇಲೆ ಇಂದು (ಬುಧವಾರ) ಮುಂಜಾನೆ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಹಲವು ಉಗ್ರರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಪಾಕಿಸ್ತಾನದ ಮೇಲೆ ಭಾರತದ ದಾಳಿಯ ನಂತರ ಹಲವಾರು ವಿಮಾನ ನಿಲ್ದಾಣಗಳು ಮುಚ್ಚಲ್ಪಟ್ಟಿದ್ದು, ವಿಮಾನಯಾನ ಸಂಸ್ಥೆಗಳು ವಿಮಾನಗಳನ್ನು ರದ್ದುಗೊಳಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಜಮ್ಮು ಮತ್ತು ಕಾಶ್ಮೀರ, ಅಮೃತಸರ, ಚಂಡಿಗಢ, ಧರ್ಮಶಾಲಾ, ಲೇಹ್‌ನ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ವಿಮಾನಯಾನ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿವೆ ಎಂದು ತಿಳಿದುಬಂದಿದೆ.
ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ನಡೆಸಿದ್ದು, ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು 9 ಕಡೆಗಳಲ್ಲಿ ದಾಳಿ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.