ADVERTISEMENT

2024ರಲ್ಲಿ ಪ್ರತಿಪಕ್ಷ ಮೈತ್ರಿಕೂಟಕ್ಕೆ ಅಧಿಕಾರ: ಖರ್ಗೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2023, 12:53 IST
Last Updated 21 ಫೆಬ್ರುವರಿ 2023, 12:53 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ‘2024ರಲ್ಲಿ ಕಾಂಗ್ರೆಸ್‌ ನೇತೃತ್ವದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದು ಹೇಗೆಂಬ ಬಗ್ಗೆ ಇತರ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತೇವೆ’ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಹೇಳಿದರು.

ನಾಗಾಲ್ಯಾಂಡ್‌ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದಿಮಾಪುರದಲ್ಲಿ ಪ್ರಚಾರದಲ್ಲಿ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಪ್ರಜಾಪ್ರಭುತ್ವವನ್ನು ಕಡೆಗಣಿಸುತ್ತಿದ್ದಾರೆ. ಆದರೆ ತಾವು ಜನರಿಂದ ಆಯ್ಕೆಯಾದವರು, ಸರ್ವಾಧಿಕಾರಿಯಂತೆ ವರ್ತಿಸಲು ಸಾಧ್ಯವಿಲ್ಲ ಎಂಬುದನ್ನು ಸಂವಿಧಾನ ನೆನಪಿಸುತ್ತಿದೆ’ ಎಂದು ಹೇಳಿದರು.

‘2024ರಲ್ಲಿ ಜನರು ನಿಮಗೆ ಪಾಠ ಕಲಿಸಲಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಈ ಬಗ್ಗೆ ಇತರ ಪಕ್ಷಗಳೊಂದಿಗೆ ಚರ್ಚಿಸುತ್ತಿದ್ದೇವೆ. ಇಲ್ಲವಾದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಯುವುದಿಲ್ಲ’ ಎಂದು ಹೇಳಿದರು.

ADVERTISEMENT

‘ನೂರು ಮಂದಿ ಮೋದಿ ಮತ್ತು ಅಮಿತ್‌ ಶಾ ಬರಲಿ. ಇದು ಭಾರತ, ಸಂವಿಧಾನವೇ ಇಲ್ಲಿ ಸಾರ್ವಭೌಮ’ ಎಂದು ಕುಟುಕಿದರು.

‘ಕಾಂಗ್ರೆಸ್‌ನ ಹಲವರು ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನೇ ಮುಡಿಪಾಗಿಟ್ಟಿದ್ದರು. ಆದರೆ ಬಿಜೆಪಿಯ ಒಬ್ಬರೇ ಒಬ್ಬರು ಸಹ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ, ತಮ್ಮ ಪ್ರಾಣ ಕಳೆದುಕೊಂಡಿಲ್ಲ. ಬದಲಾಗಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿಯನ್ನು ಕೊಂದರು. ಇಂಥವರು ದೇಶಭಕ್ತಿಯ ಬಗ್ಗೆ ಮಾತನಾಡುತ್ತಾರೆ, ಪಾಠ ಮಾಡುತ್ತಾರೆ’ ಎಂದು ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.