ADVERTISEMENT

ವಿದ್ಯಾರ್ಥಿಗಳೊಂದಿಗೆ ರಾಹುಲ್‌ ಸಂವಾದ: ಅನುಮತಿ ನಿರಾಕರಿಸಿದ ಒಸ್ಮಾನಿಯಾ ವಿ.ವಿ

ಪಿಟಿಐ
Published 2 ಮೇ 2022, 15:47 IST
Last Updated 2 ಮೇ 2022, 15:47 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ಹೈದರಾಬಾದ್: ಒಸ್ಮಾನಿಯಾ ವಿಶ್ವವಿದ್ಯಾಲಯವು ತನ್ನ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರಿಗೆ ಅನುಮತಿ ನಿರಾಕರಿಸಿದ್ದು, ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ ಅವರು ಒತ್ತಡ ಹೇರಿರುವುದೇ ಅನುಮತಿ ನಿರಾಕರಣೆಗೆ ಕಾರಣ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಕ್ಯಾಂಪಸ್‌ನೊಳಗೆ ಯಾವುದೇ ರಾಜಕೀಯ ಚಟುವಟಿಕೆಗಳಿಗೆ ಅನುಮತಿ ನೀಡಬಾರದು ಎಂದು ಕಳೆದ ವರ್ಷ ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿ ನಿರ್ಣಯ ಅಂಗೀಕರಿಸಿದೆ ಈ ಕಾರಣಕ್ಕೆ ರಾಹುಲ್‌ ಅವರ ಭೇಟಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ADVERTISEMENT

ಮೇ7ರಂದು ರಾಹುಲ್‌ ಗಾಂಧಿ ಅವರು ವಿದ್ಯಾರ್ಥಿಗಳೊಂದಿಗೆ ನಡೆಸಲಿದ್ದ ಸಂವಾದ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದ 18 ಮಂದಿ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಪೊಲೀಸರು ಭಾನುವಾರ ಬಂಧಿಸಿದ್ದರು.

ರಾಹುಲ್ ಗಾಂಧಿ ಅವರು ಬಂಧನಕ್ಕೊಳಗಾಗಿರುವ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಮೇ7 ರಂದು ಭೇಟಿಯಾಗುವ ಸಾಧ್ಯತೆ ಇದೆ ಎಂದು ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಸಂಸದ ಎ.ರೇವಂತ್‌ ರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.