ADVERTISEMENT

ಪಂಜಾಬ್: ₹ 200 ಕೋಟಿ ವೆಚ್ಚದಲ್ಲಿ 1,400 ಅಂಗನವಾಡಿ ಕೇಂದ್ರಗಳ ಸ್ಥಾಪನೆ

ಪಿಟಿಐ
Published 9 ಜನವರಿ 2025, 16:18 IST
Last Updated 9 ಜನವರಿ 2025, 16:18 IST
ಭಗವಂತ ಮಾನ್
ಭಗವಂತ ಮಾನ್   

ಚಂಡೀಗಢ: ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪಂಜಾಬ್‌ ಸರ್ಕಾರವು ₹ 200 ಕೋಟಿ ವೆಚ್ಚದಲ್ಲಿ 1,419 ಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸಲಿದೆ ಎಂದು ಸಚಿವೆ ಬಲ್ಜಿತ್‌ ಕೌರ್‌ ಗುರುವಾರ ತಿಳಿಸಿದ್ದಾರೆ.

ಕಟ್ಟಡಗಳನ್ನು ನಿರ್ಮಿಸುವುದಷ್ಟೇ ಅಲ್ಲ. ಮಗುವಿನ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬೆಳವಣಿಗೆಗೆ ಪೂರಕ ವಾತಾವರಣವನ್ನು ಕಲ್ಪಿಸುವುದು ಈ ಉಪಕ್ರಮದ ಉದ್ದೇಶ ಎಂದು ಅವರು ಹೇಳಿದ್ದಾರೆ.

ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಕೌರ್‌, 'ಹೊಸ ಅಂಗನವಾಡಿ ಕೇಂದ್ರಗಳ ನಿರ್ಮಾಣ, ಸದ್ಯ ಇರುವ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದು, ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಪೀಠೋಪಕರಣಗಳು, ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಯೋಜನೆಯ ಉದ್ದೇಶವಾಗಿದೆ' ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

'ಮೊದಲ ಹಂತದಲ್ಲಿ 1000 ಅಂಗನವಾಡಿಗಳ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ, 56 ಕಟ್ಟಡಗಳ ನಿರ್ಮಾಣ ಪೂರ್ಣಗೊಂಡಿದೆ. 644 ಕಟ್ಟಡಗಳ ಕಾರ್ಯ ಪ್ರಗತಿಯಲ್ಲಿದೆ. ಉಳಿದ 300 ಕಟ್ಟಡಗಳ ಕಾರ್ಯ ಶೀಘ್ರವೇ ಪ್ರಾರಂಭವಾಗಲಿದೆ. ಅದೇ ರೀತಿ, ಇನ್ನೂ 156 ಕೇಂದ್ರಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಇವುಗಳನ್ನು ಹೊರತುಪಡಿಸಿ, ರಾಜ್ಯದಾದ್ಯಂತ 350 ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ₹ 7 ಕೋಟಿ ಅನುದಾನ ನಿಗದಿಪಡಿಸಲಾಗಿದೆ' ಎಂದು ವಿವರಿಸಿದ್ದಾರೆ.

'ರಾಜ್ಯದಾದ್ಯಂತ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ' ಎಂದೂ ಇದೇ ವೇಳೆ ಪ್ರತಿಪಾದಿಸಿದ ಅವರು, 'ಆದಷ್ಟು ಬೇಗನೆ 3,000 ಅಂಗನವಾಡಿ ನೌಕರರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು' ಎಂದು ಮಾಹಿತಿ ನೀಡಿದರು. ಹಾಗೆಯೇ, 'ಕಳೆದ ವರ್ಷ ಅರ್ಹತೆಯ ಆಧಾರದಲ್ಲಿ 5,000 ಸಿಬ್ಬಂದಿಯನ್ನು ಪಾರದರ್ಶಕವಾಗಿ ನೇಮಕ ಮಾಡಿಕೊಳ್ಳಲಾಗಿದೆ' ಎಂಬುದಾಗಿಯೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.