ನವದೆಹಲಿ: ದೇಶದಲ್ಲಿ ಒಟ್ಟಾರೆ ಕೋವಿಡ್–19 ಪರಿಸ್ಥಿತಿಯು ಸ್ಥಿರವಾಗುತ್ತಿದ್ದು, ಇದನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಸರ್ಕಾರವು ಕಾರ್ಯಪ್ರವೃತ್ತವಾಗಿದೆ ಎಂದು ನೀತಿ (ಎನ್‌ಐಟಿಐ) ಆಯೋಗದ ಸದಸ್ಯ ವಿ.ಕೆ. ಪಾಲ್ ಶನಿವಾರ ಹೇಳಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್ ಎರಡನೇ ಅಲೆಯಲ್ಲಿ ನಾವು ಒಂದು ನಿರ್ದಿಷ್ಟ ಪ್ರಮಾಣದ ಸ್ಥಿರೀಕರಣವನ್ನು ಸ್ಪಷ್ಟವಾಗಿ ನೋಡಬಹುದು. ಕೆಲವು ರಾಜ್ಯಗಳು ಈ ಸ್ಪಷ್ಟಮಾದರಿಯನ್ನು ತೋರಿಸಿವೆ. ಇನ್ನು ಕೆಲವು ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಆತಂಕದ ಸ್ಥಿತಿಯೂ ಇದೆ. ಆದರೆ, ಒಟ್ಟಾರೆಯಾಗಿ ದೇಶದಲ್ಲಿ ಕೋವಿಡ್ ಪರಿಸ್ಥಿತಿಯು ಸ್ಥಿರವಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕಾರ್ಯಪ್ರವೃತ್ತವಾಗಿದೆ’ ಎಂದು ಅವರು ಹೇಳಿದರು.
‘ದೇಶದ ಒಟ್ಟು ಕೊರೊನಾ ವೈರಸ್ ಪ್ರಕರಣಗಳ ಶೇ 85ರಷ್ಟು ಪ್ರಕರಣಗಳು 10 ರಾಜ್ಯಗಳಿಂದ ವರದಿಯಾಗಿವೆ. 11 ರಾಜ್ಯಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು ವರದಿಯಾಗಿದ್ದರೆ, 17 ರಾಜ್ಯಗಳಲ್ಲಿ 50 ಸಾವಿರಕ್ಕಿಂತಲೂ ಕಡಿಮೆ ಪ್ರಕರಣಗಳು ವರದಿಯಾಗಿವೆ. 8 ರಾಜ್ಯಗಳಲ್ಲಿ 50 ಸಾವಿರದಿಂದ ಒಂದು ಲಕ್ಷದೊಳಗೆ ಸಕ್ರಿಯ ಪ್ರಕರಣಗಳು ವರದಿಯಾಗಿವೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.
ಹೆಚ್ಚಿನ ಪ್ರಕರಣಗಳು ವರದಿಯಾಗಿದ್ದ ಮಹಾರಾಷ್ಟ್ರ, ಉತ್ತರ ಪ್ರದೇಶ, ಗುಜರಾತ್ ಮತ್ತು ಛತ್ತೀಸಗಡ ರಾಜ್ಯಗಳಲ್ಲೂ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ ಎಂದು ಸಚಿವಾಲಯವು ಮಾಹಿತಿ ನೀಡಿದೆ.
ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ಮಾತನಾಡಿ, ‘ಕಪ್ಪು ಶಿಲೀಂಧ್ರ ರೋಗಕ್ಕೆ ಆಸ್ಪತ್ರೆಗಳಲ್ಲಿ ಸೋಂಕು ನಿಯಂತ್ರಣ ಪದ್ಧತಿಗಳ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಅನುಸರಿಸಬೇಕು. ಕೋವಿಡ್ ಎರಡನೇ ಅಲೆಯಲ್ಲಿ ಶಿಲೀಂಧ್ರ ರೋಗದಿಂದಾಗಿ ಸಾವಿಗೀಡಾದವರ ಸಂಖ್ಯೆ ಹೆಚ್ಚಾಗುತ್ತಿದೆ’ ಎಂದರು.
ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್‌ವಾಲ್ ಅವರು ಆನ್‌ಲೈನ್ ಟೆಲಿಮೆಡಿಸಿನ್ ‘ಇ–ಸಂಜೀವಿನಿ ಒಪಿಡಿ’ಯ ಅಡಿಯಲ್ಲಿ 17 ಸಾವಿರಕ್ಕೂ ಹೆಚ್ಚಿನ ವೈದ್ಯರು ಇದುವರೆಗೆ 28 ರಾಜ್ಯಗಳಲ್ಲಿ 30 ಸಾವಿರ ಜನರಿಗೆ ಮಾರ್ಗದರ್ಶನ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.