ಬಂಧನ
(ಪ್ರಾತಿನಿಧಿಕ ಚಿತ್ರ)
ಗುವಾಹಟಿ: ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದಲ್ಲಿ ಅಸ್ಸಾಂನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬಳಿಕ ಈ ಆರೋಪದಡಿ ಬಂಧಿಸಲ್ಪಟ್ಟವರ ಸಂಖ್ಯೆ 81ಕ್ಕೆ ತಲುಪಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಸೋನಿತ್‌ಪುರ ಮತ್ತು ಕಾಮರೂಪ ಜಿಲ್ಲೆಗಳಲ್ಲಿ ತಲಾ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪಾಕ್ ಬಗ್ಗೆ ಸಹಾನುಭೂತಿ ಹೊಂದಿದ್ದಕ್ಕಾಗಿ 81 ರಾಷ್ಟ್ರವಿರೋಧಿಗಳು ಈಗ ಜೈಲಿನಲ್ಲಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ರಾಷ್ಟ್ರವಿರೋಧಿ ಪೋಸ್ಟ್‌ಗಳನ್ನು ಹಂಚಿಕೊಳ್ಳುವವರ ಬಗ್ಗೆ ತೀವ್ರ ನಿಗಾವಹಿಸಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.
ಈ ಹಿಂದೆ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಮತ್ತು ಅದರ ಸಹಭಾಗಿತ್ವವನ್ನು ಸಮರ್ಥಿಸಿಕೊಂಡ ಆರೋಪದ ಮೇಲೆ ವಿರೋಧ ಪಕ್ಷ ಎಐಯುಡಿಎಫ್ ಶಾಸಕ ಅಮೀನುಲ್ ಇಸ್ಲಾಂ ಅವರನ್ನು ದೇಶದ್ರೋಹದ ಆರೋಪದ ಮೇಲೆ ಬಂಧಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಹೊರಬಂದಿದ್ದರು, ಆದರೆ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಇಸ್ಲಾಂ ಅವರನ್ನು ಮತ್ತೆ ಬಂಧಿಸಲಾಗಿದೆ. ಸದ್ಯ ಅವರು ಪೊಲೀಸ್ ವಶದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.