ADVERTISEMENT

ಪಹಲ್ಗಾಮ್ ಬದಲು ತುರ್ತು ಪರಿಸ್ಥಿತಿಗೆ 50 ವರ್ಷದ ವಿಶೇಷ ಅಧಿವೇಶನ:ಕಾಂಗ್ರೆಸ್ ಟೀಕೆ

ಪಿಟಿಐ
Published 29 ಮೇ 2025, 5:35 IST
Last Updated 29 ಮೇ 2025, 5:35 IST
<div class="paragraphs"><p>ಜೈರಾಮ್ ರಮೇಶ್</p></div>

ಜೈರಾಮ್ ರಮೇಶ್

   

(ಪಿಟಿಐ ಚಿತ್ರ)

ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷ ತುಂಬಿದ ಅಂಗವಾಗಿ ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, 'ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ, ನೈಜ ಹಾಗೂ ತುರ್ತು ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದೆ' ಎಂದು ಆರೋಪಿಸಿದ್ದಾರೆ.

'ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಅದರಿಂದ ಉಂಟಾಗುವ ಪರಿಣಾಮವನ್ನು ಚರ್ಚಿಸಲು ಪ್ರಧಾನಿಯವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕೆಂದು ಕಾಂಗ್ರೆಸ್ ಒತ್ತಾಯಿಸಿತ್ತು. ಆದರೆ ಈವರೆಗೆ ಸಭೆ ಕರೆದಿಲ್ಲ' ಎಂದು ಜೈರಾಮ್ ಉಲ್ಲೇಖಿಸಿದ್ದಾರೆ.

'ಮೇ 10ರಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಪ್ರಧಾನಿಗೆ ಪತ್ರಗಳನ್ನು ಬರೆದು ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಮನವಿ ಮಾಡಿದ್ದರು. ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಒಮ್ಮತದ ನಿರ್ಣಯ ಮಂಡಿಸುವುದು ಉದ್ದೇಶವಾಗಿತ್ತು. ಆದರೆ ನಮ್ಮ ಬೇಡಿಕೆಯನ್ನು ಪ್ರಧಾನಿ ಒಪ್ಪಿಕೊಂಡಿಲ್ಲ' ಎಂದು ಅವರು ಹೇಳಿದ್ದಾರೆ.

'ಆದರೆ ಈಗ ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷದ ಅಂಗವಾಗಿ ಜೂನ್ 25-26ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗುವುದು ಎಂಬ ಮಾತುಗಳು ಕೇಳಿಬರುತ್ತಿವೆ. ಇದು ನೈಜ ಮತ್ತು ತುರ್ತು ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೇಳೆಯುವ ಯತ್ನವಾಗಿದೆ' ಎಂದು ಜೈರಾಮ್ ಆರೋಪಿಸಿದ್ದಾರೆ.

'ಪ್ರಧಾನಿ ಮೋದಿ ನಾಯಕತ್ವದಲ್ಲಿ ದೇಶದಲ್ಲಿ ಕಳೆದ 11 ವರ್ಷಗಳಿಂದ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

'ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರು ಇನ್ನೂ ತಲೆಮರೆಸಿಕೊಂಡಿದ್ದಾರೆ ಏಕೆ? ಪಾಕ್ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅವಕಾಶ ನೀಡಿದ್ದೇಕೆ? 2020ರ ಜೂನ್ 19ಕ್ಕೆ ಚೀನಾಗೆ ಕ್ಲೀನ್ ಚಿಟ್ ಏಕೆ ನೀಡಲಾಯಿತು? ಈ ಎಲ್ಲ ಪ್ರಶ್ನೆಗಳಿಂದ ನುಣುಚಿಕೊಳ್ಳುವುದೇ ಪ್ರಧಾನಿ ಇರಾದೆಯಾಗಿದೆ' ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.