ಭದ್ರತಾ ಪಡೆ
ಚಂಡೀಗಢ: ಭಾರತ-ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮುಂದಿನ ಮೂರು ದಿನಗಳವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದು, ಪೊಲೀಸ್ ಸಿಬ್ಬಂದಿ ರಜೆಯನ್ನು ರದ್ದುಗೊಳಿಸಲಾಗಿದೆ ಪಂಜಾಬ್ ಸರ್ಕಾರ ತಿಳಿಸಿದೆ.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.
ಈ ನಡುವೆ ಭಾರತ ಮತ್ತು ಪಾಕಿಸ್ತಾನದ ಗಡಿ ಭಾಗದಲ್ಲಿ ಪರಿಸ್ಥಿತಿ ಹದಗಟ್ಟಿರುವ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳವರೆಗೆ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಗುರುವಾರ ತಡರಾತ್ರಿ, ಜಮ್ಮು, ಪಠಾಣ್‌ಕೋಟ್ ಮತ್ತು ಉಧಂಪುರದಲ್ಲಿರುವ ಮಿಲಿಟರಿ ಕೇಂದ್ರಗಳು ಸೇರಿದಂತೆ ವಿವಿಧ ಪ್ರಮುಖ ಸ್ಥಳಗಳ ಮೇಲೆ ಪಾಕಿಸ್ತಾನದ ಡ್ರೋನ್ ಮತ್ತು ಕ್ಷಿಪಣಿಗಳ ದಾಳಿಯನ್ನು ಭಾರತ ವಿಫಲಗೊಳಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವ ಸರ್ಕಾರ, ಇಂತಹ ಕಠಿಣ ಪರಿಸ್ಥಿತಿಗಳಲ್ಲಿ ಸೇನೆಯೊಂದಿಗೆ ಪಂಜಾಬ್ ಪೊಲೀಸರು ಜತೆಗೂಡಲಿದ್ದಾರೆ ಎಂದು ತಿಳಿಸಿದೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಉಗ್ರ ಸಂಘಟನೆಗಳ ಒಂಬತ್ತು ಶಿಬಿರಗಳನ್ನು ಗುರಿಯಾಗಿಸಿಕೊಂಡು ಬುಧವಾರ ಮುಂಜಾನೆ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಕಾರ್ಯಾಚರಣೆ ನಡೆಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.