ನವದೆಹಲಿ: ಭಾರತೀಯ ಸೇನೆ ‘ಆಪರೇಷನ್ ಸಿಂಧೂರ‘ ಮೂಲಕ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ, ತಕ್ಕ ಉತ್ತರ ನೀಡಿದೆ. ಈ ಮೂಲಕ ಭಾರತೀಯ ಸೇನೆ ಧೈರ್ಯ ಮತ್ತು ಸಂಯಮವನ್ನು ಪ್ರದರ್ಶಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಭಾನುವಾರ ಹೇಳಿದ್ದಾರೆ.
ಲಖನೌದ ಕಾರ್ಯಕ್ರಮವೊಂದರಲ್ಲಿ ವರ್ಚುವಲ್ ಆಗಿ ಮಾತನಾಡಿದ ಸಿಂಗ್, ಆಪರೇಷನ್ ಸಿಂಧೂರ್ ಕೇವಲ ಮಿಲಿಟರಿ ಕ್ರಮವಲ್ಲ. ಇದು ಭಯೋತ್ಪಾದನೆಯ ವಿರುದ್ಧ ಹೋರಾಡುವ ಭಾರತದ ಇಚ್ಛಾಶಕ್ತಿಯ ಸಂಕೇತವಾಗಿದೆ ಎಂದು ತಿಳಿಸಿದ್ದಾರೆ.
ಗಡಿಯಲ್ಲಿ ಭಯೋತ್ಪಾದನೆ ವಿರುದ್ಧ ಭಾರತ ಹೊಸ ಪರಿಣಾಮಕಾರಿ ಕ್ರಮಕೈಗೊಳ್ಳುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.
'ನಮ್ಮ ಸೇನೆಯು ಪಾಕಿಸ್ತಾನದ ನಾಗರಿಕರನ್ನು ಎಂದಿಗೂ ಗುರಿಯಾಗಿಸಿಕೊಂಡಿಲ್ಲ, ಸೇನಾ ನೆಲೆಗಳ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ಆದರೆ ಪಾಕಿಸ್ತಾನವು ಭಾರತದಲ್ಲಿನ ನಾಗರಿಕ ಪ್ರದೇಶಗಳು ಮತ್ತು ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ದಾಳಿಗೆ ಪ್ರಯತ್ನಿಸಿತ್ತು' ಎಂದು ಸಿಂಗ್ ತಿಳಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತವು ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ನೆಲೆಗಳ ಮೇಲೆ ಹೇಗೆ ದಾಳಿ ನಡೆಸಿದೆ ಎಂದು ಜಗತ್ತು ನೋಡಿದೆ ಎಂದು ಸಿಂಗ್ ಹೇಳಿದ್ದಾರೆ.
ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ 'ಆಪರೇಷನ್ ಸಿಂಧೂರ' ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.
ಗುರುವಾರ ತಡರಾತ್ರಿಯೂ ಭಾರತ ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್‌ಗೆ ಮತ್ತೊಮ್ಮೆ ತಿರುಗೇಟು ನೀಡಿತ್ತು. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಂಜಾಬ್, ಗುಜರಾತ್. ರಾಜಸ್ಥಾನ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ನಡೆದ ದಾಳಿಗೂ ಭಾರತೀಯ ಸೇನೆ ದಿಟ್ಟ ಪ್ರತಿರೋಧ ಒಡ್ಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.