ಜಮ್ಮುವಿನಲ್ಲಿ ಭದ್ರತಾ ಸಿಬ್ಬಂದಿ ತಪಾಸಣೆ ಕೈಗೊಂಡರು
ಪಿಟಿಐ ಚಿತ್ರ
ಜಮ್ಮು, ಶ್ರೀನಗರ: ಜಮ್ಮು ಪ್ರದೇಶದಲ್ಲಿ ಶುಕ್ರವಾರ ಸಂಜೆ ಭಾರೀ ಸ್ಫೋಟದ ಶಬ್ದ ಕೇಳಿಸಿದ್ದು, ತಕ್ಷಣ ಸೈರನ್ ಮೊಳಗಿತು. ವಿದ್ಯುತ್ ಸಂಪರ್ಕವನ್ನು ತಕ್ಷಣ ಕಡಿತಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರದಲ್ಲಿ ಜನರಿಗೆ ಎಚ್ಚರಿಕೆಯ ಸಂದೇಶ ನೀಡಲು ಮಸೀದಿಯ ಮೈಕ್‌ಗಳನ್ನು ಬಳಸಿ ಮನೆಯ ವಿದ್ಯುತ್ ದೀಪಗಳನ್ನು ಆರಿಸುವಂತೆ ಅಧಿಕಾರಿಗಳು ಸೂಚನೆ ನೀಡಿದರು.
ಏ. 22ರಂದು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆಗೈದಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ‘ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಭಯೋತ್ಪಾದಕರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನವು ಭಾರತದ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.
‘ದೊಡ್ಡ ಪ್ರಮಾಣದ ಕ್ಷಿಪಣಿ ಬಳಸಿರುವ ಸಾಧ್ಯತೆ ಇದೆ. ನಾನಿರುವ ಸ್ಥಳದ ಬಳಿಯೇ ಶಬ್ದ ಹೊರಹೊಮ್ಮಿದ್ದನ್ನು ಕೇಳಬಹುದು’ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಎಕ್ಸ್‌ನಲ್ಲಿ ವಿಷಯ ಹಂಚಿಕೊಂಡಿದ್ದಾರೆ. ಜತೆಗೆ ಇಡೀ ನಗರ ಕತ್ತಲಾಗಿರುವ ಚಿತ್ರವನ್ನೂ ಹಂಚಿಕೊಂಡಿದ್ದಾರೆ.
‘ಜಮ್ಮು ನಗರದ ಜನರು ಯಾರೂ ಹೊರಹೋಗಬಾರದು. ಮುಂದಿನ ಕೆಲ ಗಂಟೆಗಳವರೆಗೆ ಮನೆಯಲ್ಲೇ ಇರಿ ಅಥವಾ ನಿಮ್ಮ ಹತ್ತಿರದ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಿರಿ. ವದಂತಿಗಳಿಗೆ ಕಿವಿಗೊಡಬೇಡಿ ಮತ್ತು ಹರಡಬೇಡಿ. ಎಲ್ಲರೂ ಒಗ್ಗಟ್ಟಿನಿಂದ ಇರೋಣ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.