ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿ ಕುರಿತಂತೆ ಕಾಂಗ್ರೆಸ್ ಮುಖಂಡ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಉಗ್ರರ ದಾಳಿಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ಶುಕ್ರವಾರ ಇಲ್ಲಿಗೆ ಆಗಮಿಸಿದ್ದಾರೆ.
ಘಟನೆ ಕುರಿತಂತೆ ಒಮರ್ ಅಬ್ದುಲ್ಲಾ ಅವರಿಂದ ಮಾಹಿತಿ ಪಡೆದುಕೊಂಡ ರಾಹುಲ್, ಸುಮಾರು 2 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು ಎಂದು ವರದಿಯಾಗಿದೆ.
ಒಮರ್ ಅಬ್ದುಲ್ಲಾ ಭೇಟಿಗೂ ಮುನ್ನ ರಾಹುಲ್ ಗಾಂಧಿ ಬಾದಾಮಿಬಾಗ್ ಕಂಟೋನ್ಮೆಂಟ್‌ನಲ್ಲಿರುವ ಸೇನಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಅವರಿಗೆ ಸಾಂತ್ವನ ಹೇಳಿದರು. ಹಾಗೂ ದಾಳಿಯ ಬಗ್ಗೆ ಮಾಹಿತಿ ಪಡೆದುಕೊಂಡರು.
ಇದೇ ದಿನ ಸಂಜೆ ಪಕ್ಷದ ನಾಯಕರು, ವ್ಯಾಪಾರ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳು ಸೇರಿದಂತೆ ವಿವಿಧ ವಲಯದ ಜನರನ್ನೂ ಭೇಟಿ ಮಾಡಲಿದ್ದಾರೆ ಎಂದು ಕಾಶ್ಮೀರದ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಏಪ್ರಿಲ್ 22ರಂದು ನಡೆದ ದಾಳಿಯಲ್ಲಿ 28 ಜನರು ಸಾವಿಗೀಡಾಗಿದ್ದರು, ಅದರಲ್ಲಿ ಹೆಚ್ಚಿನವರು ಪ್ರವಾಸಿಗರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.