ಭದ್ರತಾ ಪಡೆ
ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಜಮ್ಮು ಮತ್ತು ಕಾಶ್ಮೀರದ ಸರ್ಕಾರ ಘೋಷಣೆ ಮಾಡಿದೆ.
ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಾಹಿತಿ ನೀಡಿದ್ದಾರೆ.
'ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತವಾಗಿದ್ದು ಹಾಗೂ ಅತೀವ ದುಃಖಿತನಾಗಿದ್ದೇನೆ. ಅಮಾಯಕ ನಾಗರಿಕರ ವಿರುದ್ಧದ ಇಂತಹ ಹೇಯ ಕೃತ್ಯಗಳಿಗೆ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗಾಗಿ ನನ್ನ ಸಂತಾಪಗಳು' ಎಂದು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅದೇ ವೇಳೆ ಭಯೋತ್ಪಾದಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ₹2 ಲಕ್ಷ ಹಾಗೂ ಸಣ್ಣಪುಟ್ಟ ಗಾಯವಾದವರಿಗೆ ₹1 ಲಕ್ಷ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ.
'ಮೃತರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕಳುಹಿಸಲು ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸಲಾಗುತ್ತಿದೆ. ಕುಟುಂಬದ ದುಃಖದೊಂದಿಗೆ ನಾವು ಭಾಗಿಯಾಗುತ್ತೇವೆ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ' ಎಂದು ಅವರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಮೃತರಲ್ಲಿ ಇಬ್ಬರು ವಿದೇಶಿಯರು ಹಾಗೂ ಇಬ್ಬರು ಸ್ಥಳೀಯರು ಸೇರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.