ಅಮಿತ್ ಶಾ
(ಪಿಟಿಐ ಚಿತ್ರ)
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಇಂದು (ಮಂಗಳವಾರ) ಲೋಕಸಭೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಶ್ರೀನಗರದ ಬಳಿ ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಸೋಮವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಸಂಸತ್ತಿನಲ್ಲಿ ಆಪರೇಷನ್ ಸಿಂಧೂರ ಕುರಿತು ನಡೆಯುತ್ತಿರುವ ವಿಶೇಷ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್ ಶಾ, ಸೋಮವಾರ ಭದ್ರತಾ ಪಡೆಗಳು ನಡೆಸಿದ 'ಆಪರೇಷನ್ ಮಹಾದೇವ' ಕಾರ್ಯಾಚರಣೆಯಲ್ಲಿ ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ತಿಳಿಸಿದ್ದಾರೆ.
ಉಗ್ರರನ್ನು ಸುಲೇಮಾನ್ ಅಲಿಯಾಸ್ ಫೈಜರ್, ಅಪ್ಘಾನಿ ಮತ್ತು ಜಿಬ್ರಾನ್ ಎಂದು ಗುರುತಿಸಲಾಗಿದೆ.
ಭಯೋತ್ಪಾದಕರಿಂದ ಎಂ9, ಎಕೆ-47 ರೈಫಲ್ ವಶಪಡಿಸಿಕೊಳ್ಳಲಾಗಿದ್ದು, ಇದರಲ್ಲಿ ಬಳಕೆ ಮಾಡಲಾದ ಗುಂಡುಗಳು ಪಹಲ್ಗಾಮ್ ದಾಳಿಯಲ್ಲಿ ಬಳಸಲಾದ ಗುಂಡುಗಳೇ ಆಗಿವೆ ಎಂದು ವಿಧಿವಿಜ್ಞಾನ ತಜ್ಞರು ಖಚಿತಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ಒಂಬತ್ತು ನೆಲೆಗಳನ್ನು ಗುರಿಯಾಗಿಸಿ ಆಪರೇಷನ್ ಸಿಂಧೂರ ಹೆಸರಿನ ಕಾರ್ಯಾಚರಣೆ ನಡೆಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.