ಭಾರತೀಯ ಸೇನಾ ಸಿಬ್ಬಂದಿ
–ಪಿಟಿಐ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಭಾರತೀಯ ಪೋಸ್ಟ್‌ಗಳ ಮೇಲೆ ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಪ್ರತಿದಾಳಿ ನಡೆಸಿದ್ದಾರೆ ಎಂದು ರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಸೇನೆ ನಡೆಸಿರುವ ಪ್ರತಿದಾಳಿಯಲ್ಲಿ ಪಾಕಿಸ್ತಾನದಲ್ಲಿ ಅಪಾರ ಪ್ರಮಾಣದ ಹಾನಿ ಹಾಗೂ ಭಾರಿ ಸಾವು-ನೋವು ಸಂಭವಿಸಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಮ್ಮು ಜಿಲ್ಲೆಯ ಅಖ್ನೂರ್ ಸೆಕ್ಟರ್‌ನ ಎಲ್‌ಒಸಿ ಬಳಿ ಶಂಕಿತ ಭಯೋತ್ಪಾದಕರು ನಡೆಸಿದ ಪ್ರಚೋದಿಸಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಕ್ಯಾಪ್ಟನ್ ಸೇರಿದಂತೆ ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದರು. ಇದಾದ ಒಂದು ದಿನದ ಬಳಿಕ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆಯಾಗಿದೆ.
2021ರ ಫೆಬ್ರುವರಿ 25ರಂದು ಭಾರತ ಮತ್ತು ಪಾಕಿಸ್ತಾನದ ನಡುವೆ ನವೀಕೃತ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕ ಎಲ್ಒಸಿ ಉದ್ದಕ್ಕೂ ಕದನ ವಿರಾಮ ಉಲ್ಲಂಘನೆ ಪ್ರಕರಣಗಳು ತಕ್ಕಮಟ್ಟಿಗೆ ಕಡಿಮೆಯಾಗಿದ್ದವು.
ಈ ಎಲ್ಲಾ ಬೆಳವಣಿಗೆಗಳ ನಡುವೆ ಪಾಕ್ ಸೇನಾಧಿಕಾರಿಯೊಬ್ಬರು ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಏತನ್ಮಧ್ಯೆ, ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಬುಧವಾರ ಸಂಜೆ ಅದೇ ಸೆಕ್ಟರ್‌ನಲ್ಲಿ ಆಕಸ್ಮಿಕವಾಗಿ ನೆಲ ಬಾಂಬ್ ಮೇಲೆ ಕಾಲಿಟ್ಟಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೆಂಧಾರ್‌ನ ನಿವಾಸಿಯಾಗಿರುವ ಜೆಸಿಒ, ಉಗ್ರ ಒಳನುಸುಳುವಿಕೆ ತಡೆಯಲು ಎಲ್‌ಒಸಿಯಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿತ್ತು. ಗಾಯಗೊಂಡಿದ್ದ ಅವರನ್ನು ಕೂಡಲೇ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಸೇನೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.