
ವಿಶಾಖಪಟ್ಟಣ (ಪಿಟಿಐ): ಬೆಂಗಾವಲು ವಾಹನಗಳು ತೆರಳಲು ಸಂಚಾರ ನಿರ್ಬಂಧಿಸಿದ್ದರಿಂದ ಜೆಇಇ ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಸುವಂತೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಆದೇಶಿಸಿದ್ದಾರೆ.
ಎಷ್ಟು ಸಮಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು, ಪರೀಕ್ಷಾ ಕೇಂದ್ರದ ಸುತ್ತಲಿನ ರಸ್ತೆಯ ಪರಿಸ್ಥಿತಿ. ಸರ್ವೀಸ್ ರಸ್ತೆಯಲ್ಲಿನ ಸಂಚಾರ ದಟ್ಟಣೆಯ ಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಪವನ್ ಕಲ್ಯಾಣ್ ಅವರು ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
‘ಆಡಳಿತಾತ್ಮಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದು. ಶಿಷ್ಟಾಚಾರ ಕ್ರಮಗಳಿಂದಾಗಿ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿಯಾಗದಂತೆ ಜಾಗ್ರತೆ ವಹಿಸುವುದು ನಮ್ಮ ಜವಾಬ್ದಾರಿಯಾಗಿದೆ’ ಎಂದು ಪವನ್ ಕಲ್ಯಾಣ್ ಸೋಮವಾರ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪವನ್ ಕಲ್ಯಾಣ್ ಮತ್ತು ಬೆಂಗಾವಲು ಪಡೆಗಳ ಸಂಚಾರಕ್ಕಾಗಿ ಇತರ ವಾಹನಗಳ ಸಂಚಾರವನ್ನು ನಿರ್ಬಂಧಿಸಿದ್ದರಿಂದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ತಲುಪುವುದು ವಿಳಂಬವಾಗಿದೆ ಎಂಬ ಪೋಷಕರ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ‘ಪವನ್ ಕಲ್ಯಾಣ್ ಅವರು ಬೆಳಿಗ್ಗೆ 8.41 ಗಂಟೆಗೆ ತೆರಳಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮುಂಚಿತವಾಗಿಯೇ ಹೊರಡಬೇಕಿತ್ತು’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.