ADVERTISEMENT

ಬಫರ್ ಝೋನ್ ಜನರನ್ನು ಸ್ಥಳಾಂತರಿಸುವಂತಿಲ್ಲ: ಕೇಂದ್ರ ಸರ್ಕಾರ

​ಪ್ರಜಾವಾಣಿ ವಾರ್ತೆ
Published 13 ಜನವರಿ 2023, 16:21 IST
Last Updated 13 ಜನವರಿ 2023, 16:21 IST

ನವದೆಹಲಿ: ‘ಸಂರಕ್ಷಿತ ಅರಣ್ಯಗಳು ಮತ್ತು ಅಭಯಾರಣ್ಯಗಳ ಸುತ್ತಲಿನ ಪ್ರದೇಶವನ್ನು ಪರಿಸರ ಸೂಕ್ಷ್ಮವಲಯ (ಇಎಸ್‌ಜೆಡ್‌) ಅಥವಾ ಬಫರ್ ಝೋನ್ ಎಂದು ಘೋಷಣೆ ಮಾಡಿರುವ ಕಾರಣಕ್ಕಾಗಿ ಅಲ್ಲಿ ವಾಸವಾಗಿರುವ ಜನರನ್ನು ಸ್ಥಳಾಂತರಿಸಲಾಗದು’ ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಪುನರುಚ್ಚರಿಸಿದೆ.

‘ಬಫರ್ ಝೋನ್‌ಗಳನ್ನು ಗುರುತಿಸುವುದರಿಂದ ಕೃಷಿ ಮತ್ತು ತೋಟಗಾರಿಕಾ ಕೃಷಿಯ ಮೇಲೆ ಪರಿಣಾಮ ಬೀರುವುದಿಲ್ಲ’ ಎಂದೂ ಕೇಂದ್ರ ಪರಿಸರ ಸಚಿವಾಲಯವು ಹೇಳಿದೆ.

ಕರ್ನಾಟಕ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಬರುವ ರಾಜ್ಯಗಳು ಪರಿಸರ ಸೂಕ್ಷ್ಮ ವಲಯಗಳಲ್ಲಿ ಮಾನವ ವಸಾಹತುಗಳ ಸ್ಥಳಾಂತರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು.

ADVERTISEMENT

‘ಸಂರಕ್ಷಿತ ಪ್ರದೇಶಗಳ ಸುತ್ತಲಿನ ಪರಿಸರ ಸೂಕ್ಷ್ಮ ವಲಯಗಳನ್ನು ರಾಜ್ಯ ಸರ್ಕಾರಗಳು ಸಲ್ಲಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ಕೇಂದ್ರ ಸರ್ಕಾರವು ಅಧಿಸೂಚನೆ ಹೊರಡಿಸುತ್ತದೆ’ ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಇತ್ತೀಚೆಗೆ ಲೋಕಸಭೆಯಲ್ಲಿ ಚರ್ಚೆಯ ವೇಳೆ ತಿಳಿಸಿದ್ದರು.

‘ಸಂರಕ್ಷಿತ ಪ್ರದೇಶಗಳ ಸುತ್ತಲಿನ ಪರಿಸರ-ಸೂಕ್ಷ್ಮ ವಲಯದ ಘೋಷಣೆಯು ಸ್ಥಳೀಯ ಜನರನ್ನು ಸ್ಥಳಾಂತರಿಸುವಿಕೆಯನ್ನು ಒಳಗೊಂಡಿರುವುದಿಲ್ಲ ಮತ್ತು ಅವರ ವೃತ್ತಿಯ ಮೇಲೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವುದಿಲ್ಲ’ ಎಂದೂ ಅವರು ಹೇಳಿದ್ದರು.

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್ ನೇತೃತ್ವದ ಸಮಿತಿಯು ತನ್ನ ವರದಿಯಲ್ಲಿ ಪಶ್ಚಿಮ ಘಟ್ಟದ ಶೇ 37ರಷ್ಟು ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಶಿಫಾರಸು ಮಾಡಿದೆ. ಪರಿಸರಕ್ಕೆ ಹಾನಿ ಮಾಡುವಂಥ ಕೈಗಾರಿಕೆಗಳು, ಗಣಿಗಾರಿಕೆ, ಕಲ್ಲು ಗಣಿಗಾರಿಕೆಗಳನ್ನು ಈ ಪ್ರದೇಶಗಳಲ್ಲಿ ಸಂಪೂರ್ಣ ನಿಷೇಧಿಸುವಂತೆಯೂ ಸಮಿತಿ ಶಿಫಾರಸು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.