ಕೋಲ್ಕತ್ತ: ಪಶ್ಚಿಮ ಬಂಗಾಳದ ರಾಜ್ಯಪಾಲರನ್ನು ಅವರ ಸಾಂವಿಧಾನಿಕ ಹುದ್ದೆಯಿಂದ ವಜಾಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕೋಲ್ಕತ್ತ ಹೈಕೋರ್ಟ್‌ನಲ್ಲಿ ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಲಾಗಿದೆ.
ಈ ಪಿಐಎಲ್ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರ ಪೀಠದ ಎದುರು ಶುಕ್ರವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ರಾಜ್ಯಪಾಲ ಜಗದೀಪ್ ಧನಕರ್ ಅವರು ಸಂವಿಧಾನದ ವ್ಯಾಪ್ತಿಯನ್ನು ಮೀರಿ ಅಸಾಂವಿಧಾನಿಕ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ವಕೀಲ ರಾಮಪ್ರಸಾದ್ ಸರ್ಕಾರ್ ಎಂಬುವವರು ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದ್ದಾರೆ.
ರಾಜ್ಯಪಾಲರ ಪದಚ್ಯುತಿಗೆ ಮನವಿ ಮಾಡಿ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಮೊದಲ ಅರ್ಜಿ ಇದಾಗಿದೆ ಎಂದು ಕೆಲ ವಕೀಲರು ಅಭಿಪ್ರಾಯಪಟ್ಟಿದ್ದಾರೆ.
‘ರಾಜ್ಯಪಾಲರು ಅಸಂವಿಧಾನಿಕವಾಗಿ ರಾಜ್ಯ ಸರ್ಕಾರವನ್ನು ಟೀಕಿಸುತ್ತಿದ್ದಾರೆ. ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ರಾಜಕೀಯ ಪಕ್ಷದ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆ. ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಿದ್ದಾರೆ’ ಎಂದು ಅರ್ಜಿದಾರ ಸರ್ಕಾರ್ ಆರೋಪಿಸಿದ್ದಾರೆ.
ರಾಜ್ಯಪಾಲ ಜಗದೀಪ್ ಧನಕರ್ ಅವರು ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರಗಳನ್ನು ಬಹಿರಂಗವಾಗಿಯೇ ವಿರೋಧಿಸಿದ್ದರು. ಇದಕ್ಕೆ ಪ್ರತಿಯಾಗಿ, ರಾಜ್ಯಪಾಲರನ್ನು ವಜಾಗೊಳಿಸುವಂತೆ ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಷ್ಟ್ರಪತಿ ಮತ್ತು ಪ್ರಧಾನಿಗೆ ಪತ್ರ ಬರೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.