ನವದೆಹಲಿ: ‘ಕೋವಿಡ್–19ನಿಂದ ಗುಣಮುಖರಾದವರಿಂದ ಪ್ಲಾಸ್ಮಾ ಮಾದರಿ ಸಂಗ್ರಹವನ್ನು ಕಡ್ಡಾಯಗೊಳಿಸುವಂತೆ ಕೇಂದ್ರ ಹಾಗೂ ಎಎಪಿ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆತ್ತಿಕೊಳ್ಳಲು ದೆಹಲಿ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.
‘ಪ್ಲಾಸ್ಮಾ ದಾನ ಮಾಡುವಂತೆ ಚಿಕಿತ್ಸೆಗೂ ಮುನ್ನ ರೋಗಿಗಳನ್ನು ಒತ್ತಾಯಿಸುವುದು ಸರಿಯಲ್ಲ. ದಾನವು ಸ್ವಯಂ ಪ್ರೇರಣೆಯಿಂದ ನಡೆಯಬೇಕು’ ಎಂದು ನ್ಯಾಯಮೂರ್ತಿಗಳಾದ ಡಿ.ಎನ್. ಪಟೇಲ್ ಹಾಗೂ ಪ್ರತೀಕ್ ಜಲಾನ್ ಅವರನ್ನೊಳಗೊಂಡ ಪೀಠ ಹೇಳಿದೆ.
ರೋಗಿಗಳ ಚಿಕಿತ್ಸೆಗೆ ಬೇಕಾಗುವಷ್ಟು ಪ್ಲಾಸ್ಮಾ ಮಾದರಿ ಸಂಗ್ರಹಿಸಲು ಕೇಂದ್ರ ಹಾಗೂ ದೆಹಲಿ ಸರ್ಕಾರಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದರು. ಇದನ್ನು ಪರಿಗಣಿಸಿದ ನ್ಯಾಯಾಲಯವು, ಪ್ಲಾಸ್ಮಾ ಲಭ್ಯವಾಗುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ವಿವಿಧ ಸಾರ್ವಜನಿಕ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.