ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡಿರುವ ದೃಶ್ಯ
ನವದೆಹಲಿ: ಗುಜರಾತ್‌ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾದ ಎಐ–171 ವಿಮಾನ ಇಂದು (ಗುರುವಾರ) ಪತನಗೊಂಡಿದೆ. ವಿಮಾನದ ತುರ್ತು ನಿರ್ಗಮನ ಬಾಗಿಲು ಬಳಿಯ ಆಸನ ಸಂಖ್ಯೆ 11ಎರಲ್ಲಿ ಕುಳಿತಿದ್ದ ರಮೇಶ್ ಎಂಬಾತ ಬದುಕುಳಿದಿದ್ದಾನೆ ಎಂದು ಅಹಮದಾಬಾದ್ ಪೊಲೀಸ್ ಕಮಿಷನರ್ ಜಿ.ಎಸ್. ಮಲಿಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಣಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆಯ ಬಗ್ಗೆ ಇನ್ನೂ ಏನನ್ನೂ ಹೇಳಲು ಸಾಧ್ಯವಿಲ್ಲ. ವಿಮಾನವು ವಸತಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು’ ಎಂದು ಹೇಳಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ 25 ಮಂದಿಯ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಹಾಗಾಗಿ ವಿಮಾನ ಅಪಘಾತದಲ್ಲಿ ಬದುಕುಳಿದಿರುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದೂ ಅವರು ತಿಳಿಸಿದ್ದಾರೆ.
ಗುಜರಾತ್‌ನ ಅಹಮದಾಬಾದ್‌ನಿಂದ ಇಂಗ್ಲೆಂಡ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಮೇಘಾನಿನಗರ್ ಪ್ರದೇಶದಲ್ಲಿ ಇಂದು (ಗುರುವಾರ) ಮಧ್ಯಾಹ್ನ 1.40ರ ಸುಮಾರಿಗೆ ಪತನಗೊಂಡಿದೆ.
ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 242 ಪ್ರಯಾಣಿಕರು ದುರಂತಕ್ಕೀಡಾದ ವಿಮಾನದಲ್ಲಿ ಇದ್ದರು. ಈ ಪೈಕಿ 169 ಜನ ಭಾರತೀಯ ಪ್ರಜೆಗಳು, 53 ಜನ ಬ್ರಿಟಿಷ್ ಪ್ರಜೆಗಳು, ಒಬ್ಬರು ಕೆನಡಾದವರು ಹಾಗೂ 7 ಮಂದಿ ಪೋರ್ಚುಗಲ್ ಪ್ರಜೆಗಳಿದ್ದರು ಎಂದು ಏರ್ ಇಂಡಿಯಾ ಸಂಸ್ಥೆ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.