ADVERTISEMENT

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಯುಪಿಯ 21 ಲಕ್ಷ ರೈತರು ಅನರ್ಹರು

ಪಿಟಿಐ
Published 7 ಸೆಪ್ಟೆಂಬರ್ 2022, 11:19 IST
Last Updated 7 ಸೆಪ್ಟೆಂಬರ್ 2022, 11:19 IST
   

ಲಖನೌ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆಯ್ಕೆಯಾದ ಉತ್ತರ ಪ್ರದೇಶದ 21 ಲಕ್ಷ ರೈತರು ಅನರ್ಹರು ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಅಲ್ಲಿನ ಕೃಷಿ ಸಚಿವ ಸೂರ್ಯ ಪ್ರತಾಪ್ ಶಾಹಿ ಹೇಳಿದ್ದಾರೆ.

ಯೋಜನೆಯಡಿ ಇದುವರೆಗೆ ಅನರ್ಹ ರೈತರಿಗೆ ನೀಡಿರುವ ಹಣವನ್ನು ಅವರಿಂದ ವಸೂಲಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಕೇಂದ್ರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 2.85 ಕೋಟಿ ರೈತರನ್ನು ಆಯ್ಕೆ ಮಾಡಲಾಗಿದ್ದು, ಈ ಪೈಕಿ 21 ಲಕ್ಷ ಫಲಾನುಭವಿಗಳು ಅನರ್ಹರು ಎಂದು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಹಿ ಹೇಳಿದರು.

ADVERTISEMENT

ಈ ಯೋಜನೆಯಡಿ ಪತಿ ಮತ್ತು ಪತ್ನಿ ಇಬ್ಬರೂ ಫಲಾನುಭವಿಗಳಾಗಿರುವ ಹಲವು ಪ್ರಕರಣಗಳು ಪತ್ತೆಯಾಗಿವೆ. ಅನರ್ಹರಿಂದ ಹಣ ವಸೂಲಿ ಪ್ರಕ್ರಿಯೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12ನೇ ಕಂತನ್ನು ಈ ತಿಂಗಳ ಅಂತ್ಯದೊಳಗೆ ಬಿಡುಗಡೆ ಮಾಡಲಾಗುವುದು ಮತ್ತು ರೈತರ ಭೂ ದಾಖಲೆಗಳು ಮತ್ತು ಸ್ಥಳ ಪರಿಶೀಲನೆಯ ಮಾಹಿತಿ ಪಿಎಂ-ಕಿಸಾನ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿದ ರೈತರಿಗೆ ಮಾತ್ರ ಪ್ರಯೋಜನ ಸಿಗಲಿದೆ ಎಂದು ಅವರು ತಿಳಿಸಿದರು.

ಕಿಸಾನ್ ಪೋರ್ಟಲ್‌ನಲ್ಲಿ ದತ್ತಾಂಶವನ್ನು ಅಪ್‌ಲೋಡ್ ಮಾಡುವ ಪ್ರಕ್ರಿಯೆಯನ್ನು ಸಮರೋಪಾದಿಯಲ್ಲಿ ಮಾಡಲಾಗುತ್ತಿದೆ ಮತ್ತು ಎಲ್ಲಾ ಅರ್ಹ ರೈತರಿಗೆ ಕಿಸಾನ್ ಸಮ್ಮಾನ್ ನಿಧಿಯ 12 ನೇ ಕಂತು ನೀಡಲಾಗುವುದು ಎಂದು ಕೃಷಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ದೇವೇಶ್ ಚತುರ್ವೇದಿ ಹೇಳಿದರು.

ಇದುವರೆಗೆ 1.51 ಕೋಟಿ ರೈತರ ಭೂ ದಾಖಲೆಗಳನ್ನು ಪೋರ್ಟಲ್‌ನಲ್ಲಿ ತುಂಬುವ ಕಾರ್ಯ ನಡೆದಿದೆ ಎಂದು ಕೃಷಿ ಸಚಿವರು ತಿಳಿಸಿದರು.

ರೈತರು ತಮ್ಮ ಡೇಟಾವನ್ನು ಆದಷ್ಟು ಬೇಗ ಪೋರ್ಟಲ್‌ಗೆ ಅಪ್‌ಲೋಡ್ ಮಾಡುವಂತೆ ಅವರು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.