ನವದೆಹಲಿ: ನೌಕಾಪಡೆಗಾಗಿ 26 ರಫೇಲ್ ಯುದ್ಧವಿಮಾನಗಳನ್ನು ಖರೀದಿಸುವುದಕ್ಕೆ ಸಂಬಂಧಿಸಿದ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆಯು, ಅಂದಾಜು ₹64 ಸಾವಿರ ಕೋಟಿ ವೆಚ್ಚದಲ್ಲಿ ಈ ಯುದ್ಧವಿಮಾನಗಳನ್ನು ಖರೀದಿಸುವುದಕ್ಕೆ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಫ್ರಾನ್ಸ್‌ನ ಡಾಸೊ ಏವಿಯೇಷನ್ ಕಂಪನಿಯು ನೌಕಾಪಡೆಗಾಗಿಯೇ ವಿಶಿಷ್ಟ ವಿನ್ಯಾಸಗಳನ್ನು ಹೊಂದಿರುವ ಈ ಅತ್ಯಾಧುನಿಕ ಯುದ್ಧವಿಮಾನಗಳನ್ನು (ರಫೇಲ್–ಎಂ) ತಯಾರಿಸಲಿದ್ದು, ಇವುಗಳನ್ನು ಯುದ್ಧನೌಕೆ ಐಎನ್‌ಎಸ್ ವಿಕ್ರಾಂತ್‌ನಲ್ಲಿ ನಿಯೋಜಿಸಲಾಗುತ್ತದೆ ಎಂದು ನೌಕಾಪಡೆ ಮೂಲಗಳು ಹೇಳಿವೆ.
ಖರೀದಿ ಒಪ್ಪಂದಕ್ಕೆ ಉಭಯ ದೇಶಗಳು ಅಂಕಿತ ಹಾಕಿದ ಮೇಲೆ, ಐದು ವರ್ಷಗಳ ನಂತರ ಈ ಯುದ್ಧವಿಮಾನಗಳ ಹಸ್ತಾಂತರ ಪ್ರಕ್ರಿಯೆ ಆರಂಭವಾಗುವುದು ಎಂದು ಇವೇ ಮೂಲಗಳು ಹೇಳಿವೆ.
ವಾಯುಪಡೆಯು ಈಗಾಗಲೇ 36 ರಫೇಲ್ ಯುದ್ಧವಿಮಾನಗಳನ್ನು ಖರೀದಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.