ADVERTISEMENT

ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದವರನ್ನು ಸುಮ್ಮನೆ ಬಿಡಲ್ಲ- ಮೌನ ಮುರಿದ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜುಲೈ 2023, 5:56 IST
Last Updated 20 ಜುಲೈ 2023, 5:56 IST
   

ನವದೆಹಲಿ: ಮಣಿಪುರ ಹಿಂಸಾಚಾರ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೊ ಕಂಡು ಆಘಾತಕ್ಕೊಳಗಾಗಿದ್ದೇನೆ. ಮಣಿಪುರದ ಹೆಣ್ಣು ಮಕ್ಕಳಿಗೆ ಏನಾಗಿದೆಯೋ ಅದನ್ನು ಕ್ಷಮಿಸಲು ಸಾಧ್ಯವಿಲ್ಲ, ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.

ಮಣಿಪುರದ ಘಟನೆಯು ಯಾವುದೇ ಸಭ್ಯ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ. ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ ಎಂದು ಮೋದಿ ಹೇಳಿದ್ದಾರೆ.

ADVERTISEMENT

‘ಮಣಿಪುರದ ಘಟನೆಯು 140 ಕೋಟಿ ಭಾರತೀಯರಿಗೆ ನಾಚಿಕೆಗೇಡಿನ ವಿಷಯವಾಗಿದೆ. ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಾನು ಭಾರತದ ಜನರಿಗೆ ಭರವಸೆ ನೀಡಲು ಬಯಸುತ್ತೇನೆ’ ಎಂದು ಪ್ರಧಾನಿ ಮೋದಿ ಹೇಳಿದರು.

ಇದೇವೇಳೆ, ಮುಂಗಾರು ಅಧಿವೇಶನದ ಸಮಯವನ್ನು ಸಂಸದರು ಜನರ ಹಿತಾಸಕ್ತಿ ದೃಷ್ಟಿಯಿಂದ ಚರ್ಚೆಗೆ ಉತ್ತಮವಾಗಿ ಬಳಸಿಕೊಳ್ಳುತ್ತಾರೆ ಎಂದು ನಂಬಿರುವುದಾಗಿ ಪ್ರಧಾನಿ ಹೇಳಿದ್ದಾರೆ.

ಮಣಿಪುರ ಹಿಂಸಾಚಾರ ಕುರಿತಂತೆ ಪ್ರಧಾನಿ ಹೇಳಿಕೆ ನೀಡಬೇಕೆಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎನ್‌ಸಿಪಿ ವರಿಷ್ಠ ಶರದ್ ಪವಾರ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರು ಒತ್ತಾಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.