ADVERTISEMENT

ಚುನಾಯಿತ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವಲ್ಲಿ ಮೋದಿ ಬ್ಯುಸಿ: ರಾಹುಲ್ ಗಾಂಧಿ

ಏಜೆನ್ಸೀಸ್
Published 11 ಮಾರ್ಚ್ 2020, 7:02 IST
Last Updated 11 ಮಾರ್ಚ್ 2020, 7:02 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವ ಬೆನ್ನಲ್ಲೇ ಮಧ್ಯಪ್ರದೇಶ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ಈ ರಾಜಕೀಯ ಬೆಳವಣಿಗೆಯ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಭಾರತದ ಪ್ರಧಾನ ಮಂತ್ರಿಗಳೇ, ನೀವು ಚುನಾಯಿತ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾಗ, ಜಾಗತಿಕ ತೈಲ ಬೆಲೆಯಲ್ಲಿ ಶೇ 35ರಷ್ಟು ಕುಸಿದಿರುವುದನ್ನು ನೀವು ಗಮನಿಸದೆ ಇರಬಹುದು. ಆದರೆ ಲೀಟರ್ ಪೆಟ್ರೋಲ್ ಬೆಲೆಯನ್ನು 60ಕ್ಕಿಂತ ಕಡಿಮೆಗೊಳಿಸುವ ಮೂಲಕ ನೀವು ಭಾರತೀಯರಿಗೆ ಲಾಭವನ್ನು ನೀಡಬಹುದೇ? ಇದು ಸ್ಥಗಿತಗೊಂಡಿರುವ ಆರ್ಥಿಕತೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ಕುಟುಕಿದ್ದಾರೆ.

ನಾಲ್ಕು ಬಾರಿ ಸಂಸದರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರ ದಿಢೀರ್ರಾಜೀನಾಮೆಯಿಂದಾಗಿ ಮಧ್ಯಪ್ರದೇಶದಲ್ಲಿ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಹೋರಾಟ ನಡೆಸುತ್ತಿದೆ.

ADVERTISEMENT

ಗಾಂಧಿ ಕುಟುಂಬದ ಆಪ್ತರಲ್ಲಿ ಗುರುತಿಸಿಕೊಂಡಿದ್ದ ಸಿಂಧಿಯಾ ಅವರು, ಪಕ್ಷದಲ್ಲಿನ ಹಿರಿಯ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿದ್ದರು. ಅಲ್ಲದೆ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿರುವ ಕುರಿತು ಬೇಸರಗೊಂಡಿದ್ದ ಅವರು ಏಕಾಏಕಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ ಅವರ ಬೆಂಬಲಿತ ಶಾಸಕರು ಕೂಡ ರಾಜೀನಾಮೆ ನೀಡಿದ್ದಾರೆ.

ಇಂದು ಮಧ್ಯಾಹ್ನ ಸಿಂಧಿಯಾ ಅವರು ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಕೇಂದ್ರದಲ್ಲಿ ಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಅಲ್ಲದೆ ಮಧ್ಯಪ್ರದೇಶದಿಂದ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗುವುದು ಎಂದೂ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.