ನರೇಂದ್ರ ಮೋದಿ
ಪಿಟಿಐ ಚಿತ್ರ
ನವದೆಹಲಿ: ಇರಾನ್ ಮೇಲೆ ಅಮೆರಿಕ–ಇಸ್ರೇಲ್ ನಡೆಸಿದ ಜಂಟಿ ದಾಳಿಯಿಂದಾಗಿ ಪಶ್ಚಿಮ ಏಷ್ಯಾದ ರಾಷ್ಟ್ರಗಳಲ್ಲಿ ಉಂಟಾಗಿರುವ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದು, ವಿವಾದಗಳನ್ನು ಮಾತುಕತೆ, ರಾಜತಾಂತ್ರಿಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ.
ಸೌದಿ ಅರೇಬಿಯಾ ಮತ್ತು ಕತಾರ್‌ನಲ್ಲಿ ಇರಾನ್ ನಡೆಸಿದ ಹೊಸ ದಾಳಿಗಳ ಬಳಿಕ ಪರಿಸ್ಥಿತಿ ಹದಗೆಡುತ್ತಿದ್ದಂತೆ, ಪಶ್ಚಿಮ ಏಷ್ಯಾದ ರಾಷ್ಟ್ರಗಳಲ್ಲಿ ವಾಸಿಸುವ ಸುಮಾರು 90 ಲಕ್ಷ ಭಾರತೀಯರ ಸುರಕ್ಷತೆ ಹಾಗೂ ಭದ್ರತೆಯ ಕುರಿತು ಭಾರತವು ನಿರಂತರವಾಗಿ ಗಮನಿಸುತ್ತಿದೆ ಎಂದು ಮೋದಿ ಹೇಳಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಮತ್ತು ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೆ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ದಾಳಿ ಮಾಡಿದ ಬಳಿಕ ಇರಾನ್, ಇಸ್ರೇಲ್ ಮತ್ತು ಯುಎಇ, ಬಹರೇನ್, ಕುವೈತ್, ಜೋರ್ಡಾನ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಹಲವಾರು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಸರಣಿ ದಾಳಿ ನಡೆಸಿದೆ.
ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವಿಗೀಡಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.