ನರೇಂದ್ರ ಮೋದಿ
–ಪಿಟಿಐ ಚಿತ್ರ
ಭೋಪಾಲ್: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ದೇಶದ ಮೊದಲ ‘ಪಿಎಂ ಮಿತ್ರ ಮೆಗಾ ಟೆಕ್ಸ್‌ಟೈಲ್ ಪಾರ್ಕ್’ಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಮೋದಿ ಅವರು ಇಂದು 75ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ‘ಸ್ವಸ್ಥ ನಾರಿ, ಸಶಕ್ತ ಪರಿವಾರ’ ಮತ್ತು ‘ರಾಷ್ಟ್ರೀಯ ಪೋಷಣ್ ಮಾಸಾಚರಣೆ’ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. 2022ರ ನಂತರ ಮೋದಿ ಅವರು ತಮ್ಮ ಜನ್ಮದಿನದಂದು ಮಧ್ಯಪ್ರದೇಶಕ್ಕೆ ಎರಡನೇ ಬಾರಿ ಭೇಟಿ ನೀಡಿದ್ದಾರೆ.
‘ಮಧ್ಯಪ್ರದೇಶ, ತೆಲಂಗಾಣ, ಗುಜರಾತ್, ಕರ್ನಾಟಕ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಏಳು ನಗರಗಳಲ್ಲಿ ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಸೌಲಭ್ಯಗಳೊಂದಿಗೆ ದೊಡ್ಡ ಪ್ರಮಾಣದ ಜವಳಿ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರವು ‘ಪಿಎಂ ಮಿತ್ರ’ ಯೋಜನೆಯನ್ನು ಆರಂಭಿಸಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಧಾರ್ ಜಿಲ್ಲೆಯ ಭೈನ್ಸೋಲಾ ಗ್ರಾಮದಲ್ಲಿ ಸುಮಾರು 2,158 ಎಕರೆ ಪ್ರದೇಶದಲ್ಲಿ ‘ಪಿಎಂ ಮಿಶ್ರ ಪಾರ್ಕ್’ ತಲೆ ಎತ್ತಲಿದೆ.
‘ಪಿಎಂ ಮಿತ್ರ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಯೋಜನೆಯು ಈಗಾಗಲೇ ನೂರಕ್ಕೂ ಹೆಚ್ಚು ಪ್ರಮುಖ ಜವಳಿ ಕಂಪನಿಗಳಿಂದ ₹23,146 ಕೋಟಿಗೂ ಹೆಚ್ಚಿನ ಹೂಡಿಕೆ ಪ್ರಸ್ತಾವನೆಗಳನ್ನು ಸ್ವೀಕರಿಸಿದೆ. ಈ ಯೋಜನೆ ಪೂರ್ಣ ಪ್ರಮಾಣದಲ್ಲಿ ಜಾರಿಯಾದರೆ ಮೂರು ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ’ ಎಂದು ಮೂಲಗಳು ತಿಳಿಸಿವೆ.
‘ಪಿಎಂ ಮಿತ್ರ ಮೆಗಾ ಟೆಕ್ಸ್‌ಟೈಲ್ ಪಾರ್ಕ್‌ನಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳು ಇರಲಿದ್ದು, ಹತ್ತಿ ಉತ್ಪಾದಕರಿಗೆ ಹೆಚ್ಚು ಪ್ರಯೋಜನವಾಗಲಿದೆ. ತ್ಯಾಜ್ಯ ಸಂಸ್ಕರಣಾ ಘಟಕ, ಸೌರ ವಿದ್ಯುತ್ ಸ್ಥಾವರ, ನೀರು ಮತ್ತು ವಿದ್ಯುತ್ ನಿರಂತರ ಪೂರೈಕೆ, ಆಧುನಿಕ ರಸ್ತೆಗಳು ಮತ್ತು 81 ಪ್ಲಗ್ ಅಂಡ್ ಪ್ಲೇ ಮಾದರಿಯ ತಯಾರಿಕ ಘಟಕಗಳಂತಹ ಅಭಿವೃದ್ಧಿಪಡಿಸಲಾಗುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.