ADVERTISEMENT

ದೆಹಲಿ ಕರ್ನಾಟಕ ಸಂಘ: ಇದೇ 25ರಂದು ಅಮೃತ ಮಹೋತ್ಸವಕ್ಕೆ ಚಾಲನೆ ನೀಡಲಿರುವ ಮೋದಿ

ಪಿಟಿಐ
Published 21 ಫೆಬ್ರುವರಿ 2023, 14:38 IST
Last Updated 21 ಫೆಬ್ರುವರಿ 2023, 14:38 IST
   

ನವದೆಹಲಿ: ದೆಹಲಿ ಕರ್ನಾಟಕ ಸಂಘದ 75ನೇ ವಾರ್ಷಿಕೋತ್ಸವದ ಎರಡು ದಿನಗಳ ಕಾರ್ಯಕ್ರಮಕ್ಕೆ ತಲಕ್‌ಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಇದೇ 25ರಂದು ಚಾಲನೆ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದ ನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸ್ಪಟಿಕಪುರದ ಮಹಾ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ಮತ್ತು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಮೈಸೂರು ರಾಜವಂಶಸ್ಥ ಯಧುವೀರ್ ಒಡೆಯರ್, ಬಿಜೆಪಿ ನಾಯಕ ಸಿ.ಟಿ. ರವಿ ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ಫೆಬ್ರುವರಿ 26ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಉಪಸ್ಥಿತರಿರುವರು.

ಮಾಧ್ಯಮಗಳಿಗೆ ಮಾಹಿತಿ ನೀಡಿದ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ಎಂ.ನಾಗರಾಜ, ಎರಡು ದಿನಗಳ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಸಂಗೀತ, ನೃತ್ಯ ಮತ್ತು ಕವನ ವಾಚನದ ಮೂಲಕ ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರದರ್ಶಿಸಲಾಗುತ್ತದೆ ಎಂದು ಹೇಳಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳಿಂದ 1,000ಕ್ಕೂ ಹೆಚ್ಚು ಕಲಾವಿದರನ್ನು ಆಹ್ವಾನಿಸಲಾಗಿದೆ ಎಂದರು.

ಪ್ರಸ್ತುತ,ಕರ್ನಾಟಕದ ಸರಿಸುಮಾರು 10,000-12,000 ಮಂದಿ ರಾಷ್ಟ್ರ ರಾಜಧಾನಿಯಲ್ಲಿ ನೆಲೆಸಿದ್ದಾರೆ. ಅದರಲ್ಲಿ ಸುಮಾರು 3,500 ಮಂದಿ ದೆಹಲಿ ಕರ್ನಾಟಕ ಸಂಘದ ಸದಸ್ಯರಾಗಿದ್ದಾರೆ ಎಂದು ಅವರು ಹೇಳಿದರು. ಅವರನ್ನು ಒಟ್ಟುಗೂಡಿಸುವ ಮತ್ತು ಸಾಂಸ್ಕೃತಿಕ ಬಾಂಧವ್ಯವನ್ನು ನಿರ್ಮಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.