ADVERTISEMENT

ಅರ್ಹ ಮಕ್ಕಳಿಗೆ ಸಾಧ್ಯವಾದಷ್ಟು ಬೇಗ ಲಸಿಕೆ ವಿತರಿಸಿ: ರಾಜ್ಯಗಳಿಗೆ ಮೋದಿ ಸಲಹೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಏಪ್ರಿಲ್ 2022, 8:36 IST
Last Updated 27 ಏಪ್ರಿಲ್ 2022, 8:36 IST
ಮುಖ್ಯಮಂತ್ರಿಗಳ ಜೊತೆಗಿನ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
ಮುಖ್ಯಮಂತ್ರಿಗಳ ಜೊತೆಗಿನ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.    

ನವದೆಹಲಿ: ಕೆಲವು ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿದ್ದು, ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ.

ಇಂದು (ಬುಧವಾರ) ನಡೆದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿರುವ ರಾಜ್ಯಗಳಲ್ಲಿ ಮಾರ್ಗಸೂಚಿಗಳನ್ನು ಪಾಲಿಸುವುದರ ಜೊತೆಗೆ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ಹೇಳಿದ್ದಾರೆ.

ADVERTISEMENT

ಓಮೈಕ್ರಾನ್ ರೂಪಾಂತರ ತಳಿಯ ಹೊಸ ಪ್ರಕರಣಗಳು ಕಂಡುಬಂದರೆ ಹೆಚ್ಚು ಗಂಭೀರವಾಗಿ ಪರಿಗಣಿಸುವಂತೆ ಪ್ರಧಾನಿ ಸಲಹೆ ನೀಡಿದ್ದಾರೆ.

‘ಕೋವಿಡ್‌ ಸೋಂಕು ಇನ್ನು ಸಂಪೂರ್ಣವಾಗಿ ದೂರವಾಗಿಲ್ಲ. ಕೋವಿಡ್ ಬಿಕ್ಕಟ್ಟು ನಿರ್ವಹಣೆಗೆ ಸಂಬಂಧಿಸಿ ಇತರ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೆಲವು ರಾಜ್ಯಗಳಲ್ಲಿ ಮಾತ್ರ ಕೋವಿಡ್‌ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಸೋಂಕು ಹರಡುವಿಕೆ ಬಗ್ಗೆ ಜಾಗರೂಕರಾಗಿರಬೇಕು’ ಎಂದು ಹೇಳಿದ್ದಾರೆ.

ಎರಡನೇ ಡೋಸ್ ಮತ್ತು ಬೂಸ್ಟರ್ ಡೋಸ್‌ ಲಸಿಕೆಯನ್ನು ತ್ವರಿತವಾಗಿ ನೀಡುವಂತೆ ರಾಜ್ಯಗಳನ್ನು ಒತ್ತಾಯಿಸಿದ ಮೋದಿ, ಅರ್ಹ ಮಕ್ಕಳಿಗೆ ಸಾಧ್ಯವಾದಷ್ಟು ಬೇಗ ಲಸಿಕೆ ವಿತರಿಸುವಂತೆ ಮನವಿ ಮಾಡಿದ್ದಾರೆ.

ದೆಹಲಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ದೈನಂದಿನ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದ್ದು, ಕಡ್ಡಾಯವಾಗಿ ಮಾಸ್ಕ್‌ ಧರಿಸುವುದು ಸೇರಿದಂತೆ ಕೆಲವು ನಿರ್ಬಂಧನೆಗಳನ್ನು ಜಾರಿಗೆ ತರಲಾಗಿದೆ.

ಇಂಧನದ ಮೇಲಿನ ಅಬಕಾರಿ ಸುಂಕಕಡಿತ:ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವಂತೆ ನಾನು ರಾಜ್ಯಗಳನ್ನು ಒತ್ತಾಯಿಸಿದ್ದೇನೆ. ಆದರೆ, ಕೆಲವು ರಾಜ್ಯಗಳು ನಿಯಮ ಪಾಲಿಸಿಲ್ಲ ಎಂದು ಮೋದಿ ಹೇಳಿದ್ದಾರೆ.

ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು ಜನರ ಮೇಲಿನ ಹೊರೆಯನ್ನು ನಿವಾರಿಸುವಉದ್ದೇಶದಿಂದ ರಾಜ್ಯಗಳು ಕೂಡಲೇ ಅಬಕಾರಿ ಸುಂಕವನ್ನು ಕಡಿತ ಮಾಡುವಂತೆ ಮೋದಿ ಅವರು ಪುನರುಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.