ADVERTISEMENT

Punjab Floods: ಪ್ರವಾಹ ಪೀಡಿತ ಪಂಜಾಬ್‌ಗೆ ಸೆ.9ರಂದು ಪ್ರಧಾನಿ ಮೋದಿ ಭೇಟಿ

ಪಿಟಿಐ
Published 7 ಸೆಪ್ಟೆಂಬರ್ 2025, 11:03 IST
Last Updated 7 ಸೆಪ್ಟೆಂಬರ್ 2025, 11:03 IST
   

ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 9ರಂದು ಪಂಜಾಬ್‌ಗೆ ಭೇಟಿ ನೀಡಲಿದ್ದು, ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಸುನಿಲ್ ಜಾಖಡ್ ಭಾನುವಾರ ತಿಳಿಸಿದ್ದಾರೆ.

ಪಂಜಾಬ್‌ನಲ್ಲಿನ ಪ್ರವಾಹ ಪರಿಸ್ಥಿತಿಯ ಬಗ್ಗೆ ಪ್ರಧಾನಿ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅವರು ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಪಂಜಾಬ್‌ಗೆ ಭೇಟಿ ನೀಡಿದ್ದು, ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ADVERTISEMENT

ಸೆಪ್ಟೆಂಬರ್ 4ರಂದು ಇಲ್ಲಿನ (ಪಂಜಾಬ್‌) ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಚೌಹಾಣ್, ಬೆಳೆ ಹಾನಿಯ ಪ್ರಮಾಣವನ್ನು ಪರಿಶೀಲಿಸಿದ್ದಾರೆ. ಈ ಬಿಕ್ಕಟ್ಟಿನ ಸಮಯಲ್ಲಿ ರೈತರಿಗೆ ರಕ್ಷಣೆ ನೀಡಲು ಕೇಂದ್ರ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ.

ಅಮೃತಸರ, ಗುರುದಾಸಪುರ ಮತ್ತು ಕಪುರ್ತಲಾ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಚೌಹಾಣ್ ಭೇಟಿ ನೀಡಿದ್ದರು.

ಭೀಕರ ಪ್ರವಾಹದಿಂದ ಪಂಜಾಬ್‌ ತತ್ತರಿಸಿದೆ. ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾದ ಕಾರಣ ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳು ಉಕ್ಕಿ ಹರಿಯುತ್ತಿದ್ದು, ಪಂಜಾಬ್‌ನ ಹೆಚ್ಚಿನ ಪ್ರದೇಶಗಳು ಜಲಾವೃತವಾಗಿವೆ.

ಇದಲ್ಲದೆ, ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದೆ.

ಪ್ರವಾಹದಿಂದಾಗಿ ರಾಜ್ಯದಲ್ಲಿ ಇದುವರೆಗೆ 46 ಜನ ಮೃತಪಟ್ಟಿದ್ದಾರೆ. 1.75 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.