ADVERTISEMENT

ಕೋವಿಡ್ ಸೋಂಕಿತರ ಸಂಖ್ಯೆ ಪಾರದರ್ಶಕವಾಗಿರಲಿ: ರಾಜ್ಯಗಳಿಗೆ ಪ್ರಧಾನಿ ಮೋದಿ

​ಪ್ರಜಾವಾಣಿ ವಾರ್ತೆ
Published 15 ಮೇ 2021, 11:50 IST
Last Updated 15 ಮೇ 2021, 11:50 IST
ನರೇಂದ್ರ ಮೋದಿ
ನರೇಂದ್ರ ಮೋದಿ    

ನವದೆಹಲಿ: ಕೋವಿಡ್ ಸೋಂಕಿತರ ಸಂಖ್ಯೆ ನೀಡುವಾಗ ಪಾರದರ್ಶಕವಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ.

ಲಸಿಕೆ ನೀಡಿಕೆ ಮತ್ತು ಕೋವಿಡ್ ಪರಿಸ್ಥಿತಿಗೆ ಸಂಬಂಧಿಸಿ ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದ ಅವರು, ಸೋಂಕಿತರ ಸಂಖ್ಯೆ ಹೆಚ್ಚಿದ್ದಲ್ಲಿ ಕಾರ್ಯನಿರ್ವಹಣೆ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂಬ ಭೀತಿಯಿಂದ ಅದನ್ನು ಮರೆಮಾಚಬಾರದು. ಯಾವುದೇ ಒತ್ತಡಕ್ಕೆ ಒಳಗಾಗದೆ ಪಾರದರ್ಶಕವಾಗಿ ಅಂಕಿಸಂಖ್ಯೆಗಳನ್ನು ನೀಡಬೇಕು ಎಂದು ಹೇಳಿದ್ದಾರೆ.

ಸೋಂಕು ಪತ್ತೆ ಪರೀಕ್ಷೆ ಹೆಚ್ಚಿಸುವಂತೆಯೂ ಪ್ರಧಾನಿಯವರು ರಾಜ್ಯಗಳಿಗೆ ಸಲಹೆ ನೀಡಿದ್ದಾರೆ. ಹೆಚ್ಚು ಪ್ರಕರಣಗಳು ಪತ್ತೆಯಾಗುವ ಪ್ರದೇಶಗಳಲ್ಲಿ ಹೆಚ್ಚು ಪರೀಕ್ಷೆಗಳನ್ನು ನಡೆಸಬೇಕು ಎಂದೂ ಅವರು ಹೇಳಿದ್ದಾರೆ.

ADVERTISEMENT

ಮಾರ್ಚ್ ಆರಂಭದಲ್ಲಿ ದೇಶದಲ್ಲಿ ವಾರಕ್ಕೆ ಸುಮಾರು 50 ಲಕ್ಷ ಕೊರೂನಾ ಪತ್ತೆ ಪರೀಕ್ಷೆ ನಡೆಸಲಾಗುತ್ತಿತ್ತು. ಮಾರ್ಚ್ ಅಂತ್ಯದ ವೇಳೆಗೆ ಇದು 1.3 ಕೋಟಿ ತಲುಪಿತ್ತು. ಸ್ಥಳೀಯ ಮಟ್ಟದಲ್ಲಿ ಕಂಟೈನ್‌ಮೆಂಟ್ ವಲಯಗಳನ್ನು ನಿರ್ಮಿಸಿ ಸೋಂಕು ಹರಡದಂತೆ ತಡೆಯುವುದು ಸದ್ಯದ ಅಗತ್ಯವಾಗಿದೆ ಎಂದು ಮೋದಿ ಹೇಳಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸುವುದರ ಜೊತೆಗೆ ಮನೆಮನೆಗೆ ತೆರಳಿ ಪರೀಕ್ಷೆ ನಡೆಸುವುದು ಮತ್ತು ಸೋಂಕಿತರಿಗೆ ಚಿಕಿತ್ಸೆ ನೀಡುವ ಕಾರ್ಯವಾಗಬೇಕಿದೆ ಎಂದು ಅವರು ಹೇಳಿದ್ದಾರೆ.

ಅಗತ್ಯ ಉಪಕರಣಗಳನ್ನು ಒದಗಿಸುವ ಮೂಲಕ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಬಲಗೊಳಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿನ ವಿರುದ್ಧ ಹೋರಾಟದಲ್ಲಿ ಇವರನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕವಾಗಿ ಆಮ್ಲಜನಕ ಪೂರೈಕೆಯಾಗುವಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದು ಮೋದಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.