ADVERTISEMENT

ಭಾರತೀಯ ನೌಕಾಪಡೆ ದಿನಾಚರಣೆ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಡಿಸೆಂಬರ್ 2022, 6:32 IST
Last Updated 4 ಡಿಸೆಂಬರ್ 2022, 6:32 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಭಾರತೀಯ ನೌಕಾಪಡೆ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರಮೋದಿ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ನೌಕಾಪಡೆ ಸಿಬ್ಬಂದಿಗೆ ಶುಭಾಶಯ ಕೋರಿದ್ದಾರೆ.

ಇದೇ ಮೊದಲ ಬಾರಿಗೆ ರಾಜಧಾನಿ ದೆಹಲಿಯ ಹೊರಗೆ ನೌಕಾಪಡೆಯ ದಿನವನ್ನು ಆಚರಿಸಲಾಗುತ್ತಿದೆ. ಈ ಬಾರಿ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಆಚರಣೆ ಹಮ್ಮಿಕೊಳ್ಳಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್.ಹರಿಕುಮಾರ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

‘ಎಲ್ಲಾ ನೌಕಾ ಸಿಬ್ಬಂದಿ ಮತ್ತು ಅವರ ಕುಟುಂಬಸ್ಥರಿಗೆ ನೌಕಾಪಡೆಯ ದಿನದ ಶುಭಾಶಯಗಳು. ಭಾರತದಲ್ಲಿ ನಾವು ನಮ್ಮ ಶ್ರೀಮಂತ ಕಡಲ ಇತಿಹಾಸದ ಬಗ್ಗೆ ಹೆಮ್ಮೆಪಡುತ್ತೇವೆ. ಭಾರತೀಯ ನೌಕಾಪಡೆಯು ನಮ್ಮ ರಾಷ್ಟ್ರವನ್ನು ದೃಢವಾಗಿ ರಕ್ಷಿಸಿದೆ. ಬಿಕ್ಕಟ್ಟಿನ ಸಂದರ್ಭಗಳಲ್ಲಿ ತನ್ನ ಮಾನವೀಯ ಮನೋಭಾವದಿಂದ ತನ್ನನ್ನು ತಾನು ಗುರುತಿಸಿಕೊಂಡಿದೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

‘ಭಾರತೀಯ ನೌಕಾಪಡೆಯು ನಮ್ಮ ದೇಶವನ್ನು ಸುರಕ್ಷಿತವಾಗಿರಿಸುವಲ್ಲಿ ಮುಂಚೂಣಿಯಲ್ಲಿದೆ. ಭಾರತೀಯ ನೌಕಾಪಡೆಯ ಶೌರ್ಯ, ಧೈರ್ಯ, ಬದ್ಧತೆ ಮತ್ತು ವೃತ್ತಿಪರತೆಯ ಬಗ್ಗೆ ರಾಷ್ಟ್ರವು ಹೆಮ್ಮೆಪಡುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

’ನೌಕಾಪಡೆಯ ದಿನದಂದು ನಮ್ಮ ಕೆಚ್ಚೆದೆಯ ನೌಕಾಪಡೆಯ ಸಿಬ್ಬಂದಿ ಮತ್ತು ಅವರ ಕುಟುಂಬಸ್ಥರಿಗೆ ಶುಭಾಶಯಗಳನ್ನು ಸಲ್ಲಿಸುತ್ತೇನೆ. ನಮ್ಮ ಕಡಲ ಗಡಿಗಳನ್ನು ರಕ್ಷಿಸುವಲ್ಲಿ ನೌಕಾಪಡೆಯ ಸಿಬ್ಬಂದಿಯ ಶೌರ್ಯ, ಸಮರ್ಪಣೆ ಮತ್ತು ಬದ್ಧತೆಯನ್ನು ನಾವು ವಂದಿಸುತ್ತೇವೆ’ ಎಂದು ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.