ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಬುಧವಾರದಂದು ಕೋವಿಡ್-19 ಲಸಿಕೆ ಹಾಕಿಸಿಕೊಂಡರು. ಈ ಕುರಿತು ಮಾಹಿತಿಯನ್ನು ಸ್ವತಃ ಪ್ರಧಾನಿ ಅವರೇ ಟ್ವಿಟರ್ ಮೂಲಕ ಹಂಚಿದ್ದಾರೆ.
'ಇಂದು ನನ್ನ ತಾಯಿ ಕೋವಿಡ್-19 ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ ಎಂಬ ವಿಷಯವನ್ನು ಹಂಚಿಕೊಳ್ಳಲು ಸಂತಸವಾಗುತ್ತಿದೆ' ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಸಂದೇಶವೊಂದನ್ನು ನೀಡಿದ್ದಾರೆ. ಕೋವಿಡ್-19 ಲಸಿಕೆ ಹಾಕಿಸಿಕೊಳ್ಳಲು ಅರ್ಹರಾಗಿರುವ ನಿಮ್ಮ ಸುತ್ತುಮುತ್ತಲಿನ ಜನರಿಗೆ ಸಹಾಯ ಮಾಡಲು ಮತ್ತು ಪ್ರೇರೇಪಿಸುವಂತೆ ಎಲ್ಲರಿಗೂ ಮನವಿ ಮಾಡುವುದಾಗಿ ತಿಳಿಸಿದರು.
99 ವರ್ಷದ ಹೀರಾಬೆನ್ ಗುಜರಾತ್‌ನ ಗಾಂಧಿನಗರ ಬಳಿ ರಾಯಿಸೆನ್‌ನಲ್ಲಿ ಕಿರಿಯ ಪುತ್ರ ಪಂಕಜ್ ಮೋದಿ ಜೊತೆ ವಾಸಿಸುತ್ತಿದ್ದಾರೆ.
ಭಾರತದಲ್ಲಿ ಹೊಸ ವರ್ಷಾರಂಭದಲ್ಲಿ ಜನವರಿ 16ರಂದು ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಕೋವಿಡ್-19 ಲಸಿಕೆ ವಿತರಣೆಗೆ ಚಾಲನೆ ನೀಡಲಾಯಿತು. ಎರಡನೇ ಹಂತದಲ್ಲಿ ಮಾರ್ಚ್ 1ರಂದು ಪ್ರಧಾನಿ ನರೇಂದ್ರ ಮೋದಿ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದರು.
ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನೆಕಾ ಸಂಸ್ಥೆಗಳು ಅಭಿವೃದ್ಧಿಪಡಿಸಿದ 'ಕೋವಿಶೀಲ್ಡ್' ಲಸಿಕೆಯನ್ನು ಪುಣೆಯ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸುತ್ತಿದೆ. ಅತ್ತ 'ಕೋವ್ಯಾಕ್ಸಿನ್' ಲಸಿಕೆಯನ್ನು ಭಾರತೀಯ ವೈದ್ಯಕೀಯ ಪರಿಷತ್ (ಐಸಿಎಂಆರ್) ಸಹಯೋಗದಲ್ಲಿ ಹೈದರಾಬಾದ್‌ನ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.