ನವದೆಹಲಿ: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ದಾಖಲಾಗಿದ್ದ ಪ್ರಕರಣವೊಂದರಲ್ಲಿ, 2022ರಲ್ಲಿ ನೀಡಿದ ತೀರ್ಪಿನ ಪುನರ್ ಪರಿಶೀಲನೆಗೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳು ವಿಚಾರಣೆಗೆ ಅರ್ಹವೇ ಎನ್ನುವುದರ ಕುರಿತು ಮೊದಲು ವಾದ ಆಲಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
‘ಪಿಎಂಎಲ್‌ಎ’ ಅಡಿ ಜಾರಿ ನಿರ್ದೇಶನಾಲಯಕ್ಕೆ ದಾಳಿ ನಡೆಸುವ, ಆರೋಪಿಗಳನ್ನು ಬಂಧಿಸುವ, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರ ಇದೆ ಎಂದು ಸುಪ್ರೀಂಕೋರ್ಟ್ 2022ರಲ್ಲಿ ತೀರ್ಪು ನೀಡಿತ್ತು. ಈ ತೀರ್ಪಿನ ಪುನರ್ ಪರಿಶೀಲನೆ ನಡೆಸುವಂತೆ ಕೋರ್ಟ್‌ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.
‘ಪಿಎಂಎಲ್‌ಎ’ ತೀರ್ಪಿನ ಪುನರ್ ಪರಿಶೀಲನೆ ಸಂದರ್ಭದಲ್ಲಿ ಎದುರಾಗಬಹುದಾದ ಮೂರು ಪ್ರಾಥಮಿಕ ಸಮಸ್ಯೆಗಳನ್ನು ಇ.ಡಿ ಪ್ರಸ್ತಾಪಿಸಿದೆ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಉಜ್ಜಲ್ ಭುಯಾನ್ ಮತ್ತು ಎನ್.ಕೋಟೀಶ್ವರ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಹೇಳಿದೆ.
ತೀರ್ಪಿನ ಮರು ಪರಿಶೀಲನಾ ಅರ್ಜಿದಾರರು ಒಟ್ಟು 13 ಪ್ರಶ್ನೆಗಳನ್ನು ಪರಿಗಣಿಸುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದಾರೆ. ಆ. 6ರಂದು ಇದರ ವಿಚಾರಣೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.