ಅತ್ಯಾಚಾರ
(ಪ್ರಾತಿನಿಧಿಕ ಚಿತ್ರ)
ಕೋಲ್ಕತ್ತ(ಪಶ್ಚಿಮ ಬಂಗಾಳ): ಕೋಲ್ಕತ್ತದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್‌ನಲ್ಲಿ (ಐಐಎಂ) ನಡೆದಿದೆ ಎನ್ನಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆಗಾಗಿ 9 ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ಭಾನುವಾರ ರಚಿಸಲಾಗಿದೆ.
ನೈರುತ್ಯ ವಿಭಾಗದ ಉಪ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ಡಿಜಿಟಲ್ ಸಾಕ್ಷ್ಯಗಳು ಹಾಗೂ ವಿಧಿವಿಜ್ಞಾನ ಸಾಕ್ಷ್ಯಗಳ ಸಂಗ್ರಹಕ್ಕೆ ತನಿಖಾ ತಂಡ ಆದ್ಯತೆ ನೀಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಐಐಎಂ ಕಾಲೇಜಿನ ಹುಡುಗರ ಹಾಸ್ಟೆಲ್‌ನ ಒಳಗೆ ಶುಕ್ರವಾರ ಕೃತ್ಯ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂತ್ರಸ್ತೆಯು ನೀಡಿದ ದೂರಿನ ಆಧಾರಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಕೌನ್ಸಿಲಿಂಗ್ ನೆಪದಲ್ಲಿ ವಿದ್ಯಾರ್ಥಿನಿಯನ್ನು ಹಾಸ್ಟೆಲ್‌ಗೆ ಕರೆಸಿಕೊಳ್ಳಲಾಗಿತ್ತು. ಅಲ್ಲಿ ನೀಡಿದ ಪಾನೀಯ ಕುಡಿದ ಬಳಿಕ ಆಕೆ ಅಸ್ವಸ್ಥಗೊಂಡಿದ್ದರು. ಪ್ರಜ್ಞೆ ಬಂದಾಗ ತನ್ನ ಮೇಲೆ ಅತ್ಯಾಚಾರವಾಗಿರುವ ಬಗ್ಗೆ ಆಕೆಗೆ ಅರಿವಾಗಿರುವುದಾಗಿ ವಿದ್ಯಾರ್ಥಿನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈಗಾಗಲೇ ವಿಧಿವಿಜ್ಞಾನ ತಂಡವು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಆಹಾರ, ವಸ್ತುಗಳ ಮಾದರಿಯನ್ನು ಸಂಗ್ರಹಿಸಿದೆ. ತನಿಖೆಯ ಭಾಗವಾಗಿ ಸಿಸಿಟಿವಿ ದೃಶ್ಯಗಳನ್ನು ಒದಗಿಸುವಂತೆಯೂ ಐಐಎಂಗೆ ಕೇಳಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.
ಏತನ್ಮಧ್ಯೆ, ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಸಂತ್ರಸ್ತೆ ಮತ್ತು ಅವರ ಕುಟುಂಬವನ್ನು ಭೇಟಿ ಮಾಡುವ ಬಗ್ಗೆ ಪೊಲೀಸರೊಂದಿಗೆ ಸಂಪರ್ಕದಲ್ಲಿದೆ ಎಂದು ಅಧ್ಯಕ್ಷೆ ಲೀನಾ ಗಂಗೋಪಾಧ್ಯಾಯ ಹೇಳಿದ್ದಾರೆ.
ಸತ್ಯ ಹೊರಬರಬೇಕು. ಸಾಮಾಜಿಕ ಕಳಂಕ ಅಥವಾ ಕೌಟುಂಬಿಕ ಒತ್ತಡದಿಂದಾಗಿ ಆಕೆ ಮುಕ್ತವಾಗಿ ಮಾತನಾಡಲು ಅಡ್ಡಿಯಾಗುತ್ತಿದ್ದರೆ ಅದನ್ನು ಮೊದಲು ಪರಿಹರಿಸಬೇಕು. ನಾವು ಈ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದೂ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.