ಪಟ್ನಾ: ಡಿಸೆಂಬರ್ 13ರಂದು ನಡೆದ ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್‌ಸಿ) ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಭಾನುವಾರ ಇಲ್ಲಿ ಪ್ರತಿಭಟನೆ ನಡೆಸಿದವರನ್ನು ಪೊಲೀಸರು ಜಲಫಿರಂಗಿ ಮತ್ತು ಲಾಠಿ ಪ್ರಹಾರದ ಮೂಲಕ ಚದುರಿಸಿದರು.
‘ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರೊಂದಿಗೆ ಇಲ್ಲಿನ ಗಾಂಧಿ ಮೈದಾನದಲ್ಲಿ ಬೆಳಿಗ್ಗೆ ಸೇರಿದ ಪ್ರತಿಭಟನಕಾರರು ಸಂಜೆಯ ವೇಳೆ, ಮುಖ್ಯಮಂತ್ರಿ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದರು. ಇದರಿಂದ ಅವರನ್ನು ಚದುರಿಸಲು ಪೊಲೀಸರು ಬಲ ಪ್ರಯೋಗಿಸಬೇಕಾಯಿತು’ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ಸಿಂಗ್ ತಿಳಿಸಿದರು.
ಪ್ರತಿಭಟನಕಾರರು ಗಾಂಧಿ ಮೈದಾನದಿಂದ ಮುಖ್ಯಮಂತ್ರಿ ನಿವಾಸದ ಕಡೆಗೆ ಮೆರವಣಿಗೆ ಮಾಡುವಾಗ ಬ್ಯಾರಿಕೇಡ್‌ಗಳನ್ನು ದಾಟಲು ಪ್ರಯತ್ನಿಸಿದರು ಎಂದು ಅವರು ಹೇಳಿದರು.
‘ಗಾಂಧಿ ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶ ನೀಡಿರಲಿಲ್ಲ. ನಿಷೇಧಾಜ್ಞೆ ಉಲ್ಲಂಘಿಸಿ 600ರಿಂದ 700 ಮಂದಿ ಅಲ್ಲಿ ಸೇರಿದ್ದರು. ಪ್ರಶಾಂತ್ ಕಿಶೋರ್, ಅವರ ಪಕ್ಷದ ಅಧ್ಯಕ್ಷ ಮನೋಜ್ ಭಾರ್ತಿ ಒಳಗೊಂಡಂತೆ 21 ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ’ ಎಂದು ಮಾಹಿತಿ ನೀಡಿದರು.
ಡಿಸೆಂಬರ್ 13ರಂದು ನಡೆದ 70ನೇ ಬಿಪಿಎಸ್‌ಸಿ ಕಂಬೈನ್ಡ್ ನೇಮಕಾತಿ ಪರೀಕ್ಷೆಯ (ಸಿಸಿಇ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿ ನೂರಾರು ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.