ADVERTISEMENT

ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | 9 ಮಂದಿ ತಪ್ಪಿತಸ್ಥರು: ಮಹಿಳಾ ನ್ಯಾಯಾಲಯ

ಪಿಟಿಐ
Published 13 ಮೇ 2025, 6:48 IST
Last Updated 13 ಮೇ 2025, 6:48 IST
   

ಕೊಯಮತ್ತೂರು (ತಮಿಳುನಾಡು): ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಮತ್ತು ಸುಲಿಗೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ 9 ಮಂದಿಯೂ ತಪ್ಪಿತಸ್ಥರೆಂದು ಕೊಯಮತ್ತೂರು ಮಹಿಳಾ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.

ನ್ಯಾಯಾಧೀಶೆ ಆರ್. ನಂದಿನಿ ದೇವಿ ಅವರು ಶಿಕ್ಷೆಯ ಪ್ರಮಾಣವನ್ನು ಮಧ್ಯಾಹ್ನ ಪ್ರಕಟಿಸಲಿದ್ದಾರೆ.

ಆರೋಪಿಗಳ ವಿರುದ್ಧ ಕ್ರಿಮಿನಲ್ ಪಿತೂರಿ, ಲೈಂಗಿಕ ಕಿರುಕುಳ, ಅತ್ಯಾಚಾರ, ಸಾಮೂಹಿಕ ಅತ್ಯಾಚಾರ ಮತ್ತು ಸುಲಿಗೆ ಆರೋಪವನ್ನು ಹೊರಿಸಲಾಗಿತ್ತು.

ADVERTISEMENT

ಏನಿದು ಪ್ರಕರಣ:

‘ನಾಲ್ವರು ಪುರುಷರ ತಂಡವೊಂದು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆ ದೃಶ್ಯವನ್ನು ರೆಕಾರ್ಡ್‌ ಮಾಡಿದರು. ನಂತರ ಆ ದೃಶ್ಯದ ವಿಡಿಯೊಗಳನ್ನಿಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ‘ ಎಂದು 2019ರ ಫೆಬ್ರುವರಿಯಲ್ಲಿ ಯುವತಿಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದರು.

ಇದೇ ವೇಳೆ ಪೊಲ್ಲಾಚಿಯಲ್ಲಿ ಅನೇಕ ಮಹಿಳೆಯರ ಮೇಲೆ ಇಂಥದ್ದೇ ಗುಂಪೊಂದು ಲೈಂಗಿಕ ದೌರ್ಜನ್ಯ ಎಸಗಿ, ಬ್ಲಾಕ್‌ ಮೇಲ್ ಮಾಡುತ್ತಿದೆ ಎಂದು ವರದಿಯಾಗಿತ್ತು. ಸಾರ್ವಜನಿಕ ವಲಯದಲ್ಲಿ ಈ ಸುದ್ದಿ ಹರಡುತ್ತಿದ್ದಂತೆ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿತ್ತು. ಅಲ್ಲದೇ ರಾಜ್ಯ ವಿಧಾನಸಭೆಯಲ್ಲೂ ಈ ವಿಚಾರ ಪ್ರತಿಧ್ವನಿಸಿತ್ತು.

ಆರಂಭದಲ್ಲಿ ಸ್ಥಳೀಯ ಪೊಲೀಸರು ಈ ಪ್ರಕರಣದ ತನಿಖೆ ನಡೆಸಿದ್ದರು. ಬಳಿಕ ಪ್ರಕರಣದ ತನಿಖೆ ನಡೆಸುವಂತೆ ಸಿಬಿ–ಸಿಐಡಿ ಪೊಲೀಸರಿಗೆ ತಮಿಳುನಾಡು ಸರ್ಕಾರ ಆದೇಶಿಸಿತ್ತು. ನಂತರ ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.