ADVERTISEMENT

ಉಪರಾಷ್ಟ್ರಪತಿ ಆಯ್ಕೆಗೆ ಮತದಾನ: ಪ್ರಧಾನಿ ಮೋದಿ ಮತ ಚಲಾವಣೆ

ಪಿಟಿಐ
Published 6 ಆಗಸ್ಟ್ 2022, 5:52 IST
Last Updated 6 ಆಗಸ್ಟ್ 2022, 5:52 IST
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತಚಲಾವಣೆ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತಚಲಾವಣೆ    

ನವದೆಹಲಿ: ಭಾರತದ ಮುಂದಿನ ಉಪರಾಷ್ಟ್ರಪತಿ ಆಯ್ಕೆಗಾಗಿ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮತದಾನ ಪ್ರಾರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ ಚಲಾವಣೆ ಮಾಡಿದ್ದಾರೆ.

ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ನಂತರ ಮತ ಎಣಿಕೆ ಕಾರ್ಯ ನಡೆಯಲಿದೆ. ಇಂದೇ ಫಲಿತಾಂಶ ಹೊರಬೀಳಿದೆ.

ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ (71) ಎನ್‌ಡಿಎ ಅಭ್ಯರ್ಥಿಯಾಗಿದ್ದರೆ, ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ (80) ಕಣಕ್ಕಿಳಿದಿದ್ದಾರೆ.

ಆಡಳಿತಾರೂಢ ಬಿಜೆಪಿಯು ಲೋಕಸಭೆಯಲ್ಲಿ ಸಂಪೂರ್ಣ ಬಹುಮತ ಹೊಂದಿದ್ದು, ರಾಜ್ಯಸಭೆಯಲ್ಲಿ 91 ಸದಸ್ಯರ ಬಲವಿದೆ. ಹೀಗಾಗಿ ಧನಕರ್‌ ಗೆಲ್ಲುವ ಸಾಧ್ಯತೆಗಳು ನಿಚ್ಚಳವಾಗಿವೆ. ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿಯು ಆಗಸ್ಟ್ 10 ರಂದು ಕೊನೆಗೊಳ್ಳಲಿದೆ.

ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲಾ ಸಂಸದರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.

ಸಂಸತ್ತಿನ ಎರಡು ಸದನಗಳಿಂದ ಒಟ್ಟು 788 ಮತಗಳಿವೆ. ರಾಜ್ಯಸಭೆಯಲ್ಲಿ ಎಂಟು ಸ್ಥಾನಗಳು ಖಾಲಿ ಉಳಿದಿವೆ. ಹೀಗಾಗಿ 780 ಮಂದಿ ಮಾತ್ರ ಈ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ.

ಮತದಾನದಿಂದ ಟಿಎಂಸಿ ದೂರ
ಮತದಾನದಿಂದ ದೂರ ಉಳಿಯುವ ತನ್ನ ನಿರ್ಧಾರಕ್ಕೆ ತೃಣಮೂಲ ಕಾಂಗ್ರೆಸ್‌ ಅಂಟಿಕೊಂಡಿದೆ. ಈ ಸಂಬಂಧ ಟಿಎಂಸಿ ಸಂಸದ ಮತ್ತು ಲೋಕಸಭೆಯ ಸಂಸದೀಯ ಪಕ್ಷದ ನಾಯಕ ಸುದೀಪ್ ಬಂಡೋಪಾಧ್ಯಾಯ ಅವರು ಪಕ್ಷದ ಸಂಸದರಿಗೆ ಸೂಚನೆಯನ್ನೂ ನೀಡಿದ್ದಾರೆ.

ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಪಕ್ಷವು ವಿರೋಧ ಪಕ್ಷಗಳ ಅಭ್ಯರ್ಥಿ ಮಾರ್ಗರೇಟ್‌ ಆಳ್ವ ಅವರನ್ನು ಬೆಂಬಲಿಸಲು ಶುಕ್ರವಾರ ತೀರ್ಮಾನಿಸಿದೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.