ADVERTISEMENT

ಕಾಂಗ್ರೆಸ್ ನಾಯಕರು ಕಾನೂನಿಗಿಂತ ದೊಡ್ಡವರು ಎಂದುಕೊಂಡಿದ್ದಾರೆ: ಪ್ರಲ್ಹಾದ ಜೋಶಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಜುಲೈ 2022, 10:09 IST
Last Updated 22 ಜುಲೈ 2022, 10:09 IST
ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ ಜೋಶಿ   

ನವದೆಹಲಿ:ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ತನಿಖೆಗೆ ಒಳಪಡಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವಕಾಂಗ್ರೆಸ್ಸಿಗರು ಕಾನೂನಿಗಿಂತ ದೊಡ್ಡವರು ಎಂದು ಭಾವಿಸಿದ್ದಾರೆ ಎಂದುಕೇಂದ್ರಸಚಿವ ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಜೋಶಿ, 'ಸೋನಿಯಾ ಹಾಗೂ ರಾಹುಲ್‌ ಗಾಂಧಿ ಇಬ್ಬರೂ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಆದರೆ, ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ವಜಾ ಆಗಿಲ್ಲ. ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಧಾನಿ ಮೋದಿ ಮುಖ್ಯಮಂತ್ರಿಯಾಗಿದ್ದಾಗ ಅವರಿಗೂ ಕಾಂಗ್ರೆಸ್‌ನವರು ಕಿರುಕುಳ ನೀಡಿದ್ದಾರೆ. ನಿನ್ನೆ, ನಾವು ಬೆಲೆ ಏರಿಕೆ ಕುರಿತ ಚರ್ಚೆಗೆ ಒಪ್ಪಿಕೊಂಡ ನಂತರವೂ ಸಂಸತ್‌ ಕಲಾಪಕ್ಕೆ ಅವಕಾಶ ನೀಡಿಲ್ಲ. ಅವರು ಕಾನೂನಿಗಿಂತ ದೊಡ್ಡವರು ಎಂದು ಭಾವಿಸಿದ್ದಾರೆ' ಎಂದು ಹೇಳಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಸಂಬಂಧ ರಾಹುಲ್‌ ಮತ್ತು ಸೋನಿಯಾ ಗಾಂಧಿ ಅವರ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ರಾಹುಲ್‌, ಕಳೆದ ತಿಂಗಳು ಸುಮಾರು 50 ಗಂಟೆ ವಿಚಾರಣೆಗೆ ಹಾಜರಾಗಿದ್ದರು. ಸೋನಿಯಾ ಅವರು ಗುರುವಾರ ತನಿಖೆಗೆ ಹಾಜರಾಗಿದ್ದರು.

ADVERTISEMENT

ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿರುವುದು ಹಾಗೂ ಬೆಲೆ ಏರಿಕೆ ವಿಚಾರವಾಗಿ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಶುಕ್ರವಾರವೂ ಪ್ರತಿಭಟನೆ ನಡೆಸುತ್ತಿರುವುದರಿಂದ ಸಂಸತ್‌ ಕಲಾಪಕ್ಕೆ ಅಡ್ಡಿಯಾಗಿದೆ. ವಿರೋಧ ಪಕ್ಷಗಳ ನಾಯಕರು ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವುದರ ಜೊತೆಗೆ, ಭಿತ್ತಿ ಪತ್ರಗಳನ್ನು ಪ್ರದರ್ಶಿಸುತ್ತಿದ್ದಾರೆ. ಹೀಗಾಗಿ ಕಲಾಪವನ್ನು ಮುಂದೂಡಲಾಗಿದೆ.

ಇ.ಡಿ. ವಿಚಾರಣೆಗೆ ಸಂಬಂಧಿಸಿದಂತೆ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ವಿರೋಧ ಪಕ್ಷಗಳುಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜಕೀಯ ಪಕ್ಷಗಳ ವಿರುದ್ಧ 'ಪ್ರತಿಕಾರದ ರಾಜಕಾರಣ' ನಡೆಸುತ್ತಿದೆ ಎಂದು ಆರೋಪಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.