ADVERTISEMENT

ಸಿಬಿಎಸ್‌ಇ: ಬಾಕಿ ವಿಷಯಗಳ ಪರೀಕ್ಷೆಗೆ ಒತ್ತು

ಕೋವಿಡ್‌–19ನಿಂದಾಗಿ 10 ಹಾಗೂ 12ನೇ ತರಗತಿ ಪರೀಕ್ಷೆ ಮುಂದೂಡಲಾಗಿತ್ತು

ಪಿಟಿಐ
Published 29 ಏಪ್ರಿಲ್ 2020, 19:30 IST
Last Updated 29 ಏಪ್ರಿಲ್ 2020, 19:30 IST
   

ನವದೆಹಲಿ: ಸಿಬಿಎಸ್‌ಇಯ 10 ಮತ್ತು 12ನೇ ತರಗತಿಗಳ ಬಾಕಿ ಉಳಿಸಿರುವ 29 ವಿಷಯಗಳ ಪರೀಕ್ಷೆ ನಡೆಸಲು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸಿದ್ಧವಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಕೋವಿಡ್‌–19 ಹಿನ್ನೆಲೆಯಲ್ಲಿ ಈ ಎರಡು ತರಗತಿಗಳ 29 ವಿಷಯಗಳ ಪರೀಕ್ಷೆಯನ್ನು ಮುಂದೂಡಲಾಗಿದೆ.‍ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಬಾಕಿ ಇರುವ ವಿಷಯಗಳ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ಪರೀಕ್ಷೆ ನಡೆದಿರುವ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭಿಸುವಂತೆ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ ಎಂದೂ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯಗಳ ಶಿಕ್ಷಣ ಸಚಿವರೊಂದಿಗೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಅವರು ಮಂಗಳವಾರ ಸಂವಾದ ನಡೆಸಿದ ವೇಳೆಯಲ್ಲಿ ಈ ವಿಷಯ ಪ್ರಸ್ತಾಪವಾಗಿತ್ತು.

ADVERTISEMENT

ದೆಹಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಮಾತನಾಡಿ, ‘ಈ ಹಂತದಲ್ಲಿ ಬಾಕಿ ಇರುವ ವಿಷಯಗಳ ಪರೀಕ್ಷೆ ನಡೆಸುವುದು ಕಾರ್ಯಸಾಧುವಲ್ಲ. ಹೀಗಾಗಿ ಆಂತರಿಕ ಮೌಲ್ಯಮಾಪನದ ಆಧಾರದ ಮೆಲೆ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಬೇಕು’ ಎಂದು ಸಲಹೆ ನೀಡಿದ್ದರು.

ವಿದೇಶಗಳಲ್ಲಿರುವ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆಗಳನ್ನು ನಡೆಸುವುದಿಲ್ಲ ಎಂದು ಸಚಿವಾಲಯ ಈಗಾಗಲೇ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.