
ಗೋವಾ ನೈಟ್ ಕ್ಲಬ್ ದುರಂತ
ನವದೆಹಲಿ: ಉತ್ತರ ಗೋವಾದ ನೈಟ್ ಕ್ಲಬ್‌ವೊಂದರಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ 25 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
‘ಉತ್ತರ ಗೋವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಪ್ರಾಣಹಾನಿ ಆಗಿರುವುದು ತೀವ್ರ ನೋವುಂಟು ಮಾಡಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಹಾಗೆಯೇ ಗಾಯಗೊಂಡವರು ಶ್ರೀಘ್ರವಾಗಿ ಚೇತರಿಸಿಕೊಳ್ಳಲಿ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಅಗ್ನಿ ಅವಘಡ ತೀವ್ರ ದುಃಖಕರ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ. ಘಟನೆ ಸಂಬಂಧ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರೊಂದಿಗೆ ಮಾತನಾಡಿದ್ದೇನೆ. ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ಒದಗಿಸುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಗೋವಾದ ಅರ್ಪೋರಾದಲ್ಲಿ 20ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಭೀಕರ ಬೆಂಕಿ ದುರಂತದಿಂದ ತೀವ್ರ ನೋವುಂಟಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದು ಕೇವಲ ದುರಂತವಲ್ಲ, ಸುರಕ್ಷತೆ ಮತ್ತು ಆಡಳಿತದ ವೈಫಲ್ಯ. ಘಟನೆ ಸಂಬಂಧ ಸರ್ಕಾರ ಪಾರದರ್ಶಕವಾಗಿ ತನಿಖೆ ನಡೆಸಬೇಕು. ಇಂತಹ ದುರಂತಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದೂ ರಾಹುಲ್ ಆಗ್ರಹಿಸಿದ್ದಾರೆ.
ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶಿಸಿದ್ದಾರೆ. ಅಲ್ಲದೆ ಬಿರ್ಚ್ ಬೈ ರೊಮಿಯೊ ಲೇನ್ ನೈಟ್ ಕ್ಲಬ್ ಮಾಲೀಕ ಹಾಗೂ ಪ್ರಧಾನ ವ್ಯವಸ್ಥಾಪಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
‘ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದೆ. ದುರಂತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ’ ಎಂದು ಸಿಎಂ ಸಾವಂತ್ ತಿಳಿಸಿದ್ದಾರೆ.
ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ₹50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.