ನವದೆಹಲಿ: ಭಾರಿ ಜಿದ್ದಾಜಿದ್ದಿ ಏರ್ಪಟ್ಟಿದ್ದ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ವಿಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ, ಕರ್ನಾಟಕದ ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನಃದೃಢೀಕರಿಸುತ್ತದೆ ಎಂದಿದ್ದಾರೆ.
ಮತ್ತೊಂದು ಟ್ವೀಟ್‌ನಲ್ಲಿ, ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಇದರಂತೆ ಗೃಹ ಸಚಿವ ಅಮಿತ್ ಶಾ ಕೂಡ ಕನ್ನಡದಲ್ಲಿಯೇ ಟ್ವೀಟ್ ಮಾಡಿ,ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು. ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಭದ್ರಕೋಟೆಯಾಗಿದ್ದ ತುಮಕೂರು ಜಿಲ್ಲೆ ಶಿರಾ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದೆ. ಯೋಜಿತ ಕಾರ್ಯತಂತ್ರ ಮತ್ತು ಸಂಘಟಿತ ಪ್ರಚಾರದ ಮೂಲಕ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಕಾಂಗ್ರೆಸ್‌ನ ಹಿರಿಯ ನಾಯಕ ಟಿ.ಬಿ.ಜಯಚಂದ್ರ ಮತ್ತು ಜೆಡಿಎಸ್‌ನ ಅಮ್ಮಾಜಮ್ಮ ಅವರನ್ನು ಡಾ.ರಾಜೇಶ್‌ಗೌಡ ಪರಾಭವಗೊಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.