ADVERTISEMENT

ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ನಡೆಸಿ: ಪ್ರಿಯಾಂಕಾ ಗಾಂಧಿ

ಪಿಟಿಐ
Published 9 ಏಪ್ರಿಲ್ 2021, 6:55 IST
Last Updated 9 ಏಪ್ರಿಲ್ 2021, 6:55 IST
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ   

ನವದೆಹಲಿ: ಕೋವಿಡ್ ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸಲು ಮುಂದಾಗಿರುವ ಸಿಬಿಎಸ್‌ಇ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಸದ್ಯದ ಪರಿಸ್ಥಿತಿಯಲ್ಲಿ ಸಿಬಿಎಸ್‌ಸಿ ಯಂತಹ ಮಂಡಳಿಗಳು ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯಲು ಒಂದೆಡೆ ಸೇರುವಂತೆ ಒತ್ತಡ ಹೇರುವುದು ಬೇಜವಾಬ್ದಾರಿ ನಡೆಯಾಗಿದೆ. ಒಂದೋ ಪರೀಕ್ಷೆಗಳನ್ನು ರದ್ದು ಪಡಿಸಬೇಕು. ಇಲ್ಲವಾದಲ್ಲಿ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಬೇಕು ಅಥವಾ ದೈಹಿಕವಾಗಿ ವಿದ್ಯಾರ್ಥಿಗಳು ಒಂದೆಡೆ ಸೇರಿ ಪರೀಕ್ಷೆ ಬರೆಯದಂತೆ ಪರ್ಯಾಯ ವ್ಯವಸ್ಥೆ ಮಾಡಬೇಕು’ಎಂದು ಉಲ್ಲೇಖಿಸಿದ್ದಾರೆ.

ಸಿಬಿಎಸ್‌ಇ ಮಂಡಳಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ 10ನೇ ತರಗತಿ ವಿದ್ಯಾರ್ಥಿಗಳಿಗೆ ಮೇ 4ರಿಂದ ಜೂನ್ 7ರವರೆಗೆ ಪರೀಕ್ಷೆ ನಿಗದಿಯಾಗಿದೆ. 12ನೇ ತರಗತಿಯ ವಿದ್ಯಾರ್ಥಿಗಳಿಗೆ ಮೇ 4ರಿಂದ ಜೂನ್ 15ರ ಅವಧಿಯಲ್ಲಿ ಪರೀಕ್ಷೆಗಳು ನಡೆಯಲಿವೆ.

ADVERTISEMENT

ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿದೆ. ದಿನವೊಂದರಲ್ಲಿ ಲಕ್ಷಕ್ಕೂ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಈ ಟ್ವೀಟ್ ಮಾಡಿದ್ದಾರೆ.

ಈ ಮಧ್ಯೆ, ಪರೀಕ್ಷೆಗಳನ್ನು ಆನ್‌ಲೈನ್‌ನಲ್ಲಿ ನಡೆಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಈ ಕುರಿತು ಸಹಿ ಸಂಗ್ರಹ ನಡೆಯುತ್ತಿದ್ದು ಲಕ್ಷಾಂತರ ವಿದ್ಯಾರ್ಥಿಗಳು ಈಗಾಗಲೇ ಸಹಿ ಹಾಕಿದ್ದಾರೆ.

'ಕೋವಿಡ್ ಮಾರ್ಗಸೂಚಿಗಳಿಗೆ ಅನುಸಾರವಾಗಿ ದೇಶದಾದ್ಯಂತ ಪರೀಕ್ಷಾ ಕೇಂದ್ರಗಳನ್ನು ಶೇಕಡ 40 - 50ರಷ್ಟು ಹೆಚ್ಚಿಸಲಾಗಿದೆ. ಅಂತರ ಕಾಯ್ದುಕೊಂಡು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗಲೆಂದು ಈ ಕ್ರಮ ಕೈಗೊಳ್ಳಲಾಗಿದೆ' ಎಂದು ಸಿಬಿಎಸ್‌ಇ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.