ADVERTISEMENT

‘ಎಸ್‌ಐಆರ್‌’ ಬಹಳ ದೊಡ್ಡ ವಿಷಯ, ಚರ್ಚೆಗೆ ಸರ್ಕಾರ ಒಪ್ಪಿಕೊಳ್ಳಲೇಬೇಕು: ಪ್ರಿಯಾಂಕಾ

ಪಿಟಿಐ
Published 4 ಆಗಸ್ಟ್ 2025, 10:24 IST
Last Updated 4 ಆಗಸ್ಟ್ 2025, 10:24 IST
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ   

ನವದೆಹಲಿ: ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’ಯು (ಎಸ್‌ಐಆರ್‌) ಬಹಳ ದೊಡ್ಡ ವಿಷಯವಾಗಿದ್ದು, ಕೇಂದ್ರ ಸರ್ಕಾರ ಇದರ ಬಗ್ಗೆ ಚರ್ಚೆಗೆ ಒಪ್ಪಿಕೊಳ್ಳಲೇಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ನಡೆಸಿದ ಪ್ರತಿಭಟನೆಯಿಂದಾಗಿ ಲೋಕಸಭೆ ಕಲಾಪವನ್ನು ಮುಂದೂಡಿದ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಅವರು ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

ಎಸ್‌ಐಆರ್ ವಿರೋಧಿಸಿ ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಆರ್‌ಜೆಡಿ, ಸಮಾಜವಾದಿ ಪಕ್ಷ ಸೇರಿದಂತೆ ಲೋಕಸಭೆ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಹಲವು ನಾಯಕರು ಪ್ರತಿದಿನ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ADVERTISEMENT

ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಬಿಹಾರದಲ್ಲಿ ಎಸ್‌ಐಆರ್‌ ನಡೆಸುತ್ತಿರುವ ಚುನಾವಣಾ ಆಯೋಗ, ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಗುರಿ ಹಾಕಿಕೊಂಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಸಂಸತ್ತಿನ ಉಭಯ ಸದನಗಳಲ್ಲಿ ಈ ವಿಚಾರದ ಬಗ್ಗೆ ಚರ್ಚೆಯಾಗಬೇಕು ಎಂದೂ ಒತ್ತಾಯಿಸುತ್ತಿವೆ.

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನದ ಹಿನ್ನೆಲೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.