ಬಂಧನ
(ಪ್ರಾತಿನಿಧಿಕ ಚಿತ್ರ)
ಪುಣೆ: ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿರುವುದಾಗಿ ನಕಲಿ ಪ್ರಮಾಣ ಪತ್ರ ಸೃಷ್ಟಿಸಿದ ಆರೋಪದ ಮೇಲೆ ಪುಣೆ ಮೂಲದ ಕಾಲೇಜಿನ ರಸಾಯನಶಾಸ್ತ್ರ ಪ್ರಾಧ್ಯಾಪಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಘೋಲಿಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ವೀರೇಂದ್ರ ಸಿಂಗ್ ಯಾದವ್ ಬಂಧಿತ ಆರೋಪಿ.
2025–26ನೇ ಸಾಲಿನ ‘ರಾಷ್ಟ್ರೀಯ ವಿಜ್ಞಾನ ಪುರಸ್ಕಾರ’ಕ್ಕೆ ಆಯ್ಕೆಯಾಗಿರುವುದಾಗಿ ವೀರೇಂದ್ರ ಸಿಂಗ್ ಅವರು ನಕಲಿ ಪತ್ರವೊಂದನ್ನು ಸೃಷ್ಟಿಸಿಕೊಂಡಿದ್ದರು. ರಾಷ್ಟ್ರೀಯ ರಸಾಯನಿಕ ಪ್ರಯೋಗಾಲಯದ (ಎನ್‌ಸಿಎಲ್) ಭದ್ರತಾ ಅಧಿಕಾರಿಯೊಬ್ಬರು ಈ ಬಗ್ಗೆ ದೂರು ನೀಡಿದ್ದರು.
ವೀರೇಂದ್ರ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 318 (4) (ವಂಚನೆ) ಹಾಗೂ ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
‘ಶಾಂತಿ ಸ್ವರೂಪ ಭಟ್ನಾಗರ ಪ್ರಶಸ್ತಿ’ಯನ್ನು 2022ರಲ್ಲಿ ‘ರಾಷ್ಟ್ರೀಯ ವಿಜ್ಞಾನ ಪುರಸ್ಕಾರ’ ಎಂದು ಮರುನಾಮಕರಣ ಮಾಡಲಾಯಿತು. ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರದಲ್ಲಿನ ಅತ್ಯುನ್ನತ ಸಾಧನೆಗೆ ಈ ಗೌರವವನ್ನು ನೀಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.